ಸಾರಾಂಶ
ಬೆಂಗಳೂರು : ರಸ್ತೆಯಲ್ಲಿ ಒಂಟಿ ಮಹಿಳೆಯರಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಡಿ.ಜೆ.ಹಳ್ಳಿ ಮದೀನಾಪಾಳ್ಯದ ಆರೀಫ್ ಖಾನ್ (24) ಮತ್ತು ಮುಷ್ತಾಕೀಬ್ ಪಾಷಾ (21) ಬಂಧಿತರು. ಆರೋಪಿಗಳಿಂದ 3 ಲಕ್ಷ ರು. ಮೌಲ್ಯದ 47 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ನ.22ರಂದು ಮಹಿಳೆಯೊಬ್ಬರು ಅಗ್ರಹಾರ ಬಡಾವಣೆ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿದ ಇಬ್ಬರು ಅಪರಿಚಿತರು ಏಕಾಏಕಿ ಮಹಿಳೆಯ ಕುತ್ತಿಗೆ ಕೈ ಹಾಕಿ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪ್ರಕರಣದ ತನಿಖೆ ವೇಳೆ ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸಾರಾಯಿಪಾಳ್ಯ ಮುಖ್ಯರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಸರ ಕಿತ್ತು ಪರಾರಿಯಾಗಿದ್ದು ತಾವೇ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಬಳಿಕ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ದುಶ್ಟಟಗಳಿಗೆ ಹಣ ಹೊಂದಿಸಲು ದುಷ್ಕೃತ್ಯ:
ಆರೋಪಿಗಳು ದುಶ್ಚಟಗಳ ದಾಸರಾಗಿದ್ದು, ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಸರ ಕಳ್ಳತನಕ್ಕೆ ಇಳಿದಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಇವರ ಬಂಧನದಿಂದ ಸಂಪಿಗೆಹಳ್ಳಿ ಮತ್ತು ಸಂಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ತಲಾ ಒಂದು ಸರ ಕಳವು ಪ್ರಕರಣಗಳು ಪತ್ತೆಯಾಗಿವೆ. ಸದ್ಯ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.