ಸಾರಾಂಶ
ಬೆಂಗಳೂರು : ಇತ್ತೀಚೆಗೆ ನಿರ್ಮಾಣ ಹಂತದ ಕಟ್ಟಡದಲ್ಲಿ ಮದ್ಯದ ಪಾರ್ಟಿ ಮಾಡುವಾಗ ಕ್ಷುಲ್ಲಕ ಕಾರಣಕ್ಕೆ ನಡೆದಿದ್ದ ಕಾರ್ಮಿಕನ ಕೊಲೆ ಪ್ರಕರಣ ಸಂಬಂಧ ಆರೋಪಿಯನ್ನು ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜಿಗಣಿಯ ಹರೀಶ್(34) ಬಂಧಿತ. ಜು.7ರಂದು ಮಧ್ಯರಾತ್ರಿ ನಿರ್ಮಾಣ ಹಂತದ ಕೊತ್ತನೂರು ಸಮುದಾಯ ಭವನ ಕಟ್ಟಡದಲ್ಲಿ ಮದ್ಯದ ಪಾರ್ಟಿ ಮಾಡುವಾಗ ಸ್ನೇಹಿತರಾದ ಬಾಲಾಜಿ(43) ಮತ್ತು ಮೂರ್ತಿ ಎಂಬುವವರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ಬಾಲಾಜಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ಹಿನ್ನೆಲೆ:
ನೇಪಾಳ ಮೂಲದ ಬಾಲಾಜಿ, ಮೂರ್ತಿ ಹಾಗೂ ಹರೀಶ್ ಸ್ನೇಹಿತರು. ದಿನಗೂಲಿ ಮಾಡಿಕೊಂಡು ರಾತ್ರಿ ವೇಳೆ ಎಲ್ಲೆಂದರಲ್ಲಿ ಮಲಗುತ್ತಿದ್ದರು. ಜು.7ರಂದು ಮಧ್ಯರಾತ್ರಿ ನಿರ್ಮಾಣ ಹಂತದ ಕೊತ್ತನೂರು ಸಮುದಾಯ ಭವನ ಕಟ್ಟದಲ್ಲಿ ಮೂವರು ಸೇರಿ ಮದ್ಯದ ಪಾರ್ಟಿ ಮಾಡಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಬಾಲಾಜಿ, ಮೂರ್ತಿ ಹಾಗೂ ಹರೀಶ್ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಬೈದಾಡಿಕೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಹರೀಶ್ ಅಲ್ಲೇ ಇದ್ದ ದೊಣ್ಣೆ ತೆಗೆದು ಬಾಲಾಜಿ ಮತ್ತು ಮೂರ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ.
ನಿರ್ಮಾಣ ಹಂತದ ಕಟ್ಟಡದಲ್ಲಿ ಗಲಾಟೆ ಸದ್ದು ಕೇಳಿ ಸಾರ್ವಜನಿಕರು 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಹೋಯ್ಸಳ ಸಿಬ್ಬಂದಿ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಾಜಿಯನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಬಾಲಾಜಿ ಮೃತಪಟ್ಟಿದ್ದ. ಘಟನೆ ಬಳಿಕ ಗಾಯಾಳು ಮೂರ್ತಿ ಸ್ಥಳದಿಂದ ಪರಾರಿಯಾಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದ.
200ಕ್ಕೂ ಅಧಿಕ ಸಿಸಿಟಿವಿ ಪರಿಶೀಲನೆ
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಕೋಣನಕುಂಟೆ ಠಾಣೆ ಪೊಲೀಸರು, ಘಟನಾ ಸ್ಥಳದ ಸುತ್ತಮುತ್ತ ಸೇರಿದಂತೆ ಸುಮಾರು 200ಕ್ಕೂ ಅಧಿಕ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿದಾಗ ಆರೋಪಿ ಹರೀಶ್ ಸುಳಿವು ಪತ್ತೆಯಾಗಿತ್ತು. ಈ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಯಿತು. ಈ ವೇಳೆ ಕೋಪಗೊಂಡು ಬಾಲಾಜಿ ಮತ್ತು ಮೂರ್ತಿ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾಗಿ ಆರೋಪಿಯು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.