ಸಾರಾಂಶ
ಬೆಂಗಳೂರು : ಮಾಜಿ ಸಚಿವ ಮುನಿರತ್ನ ವಿರುದ್ಧದ ಜಾತಿ ನಿಂದನೆ ಆರೋಪದ ಪ್ರಕರಣದ ಸಂಬಂಧ ಆಡಿಯೋದಲ್ಲಿ ಮಾತನಾಡಿರುವ ದನಿ ಮುನಿರತ್ನ ಅವರದೇ ಎಂಬುದು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್)ದ ವರದಿಯಲ್ಲಿ ಧೃಪಟ್ಟಿದೆ. ಈ ವರದಿಯು ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಕೈ ಸೇರಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
ಮಾಜಿ ಸಚಿವ ಮುನಿರತ್ನ ಅವರು ಗುತ್ತಿಗೆದಾರ ಚೆಲುವರಾಜುಗೆ ಜತೆಗೆ ಮೊಬೈಲ್‌ನಲ್ಲಿ ಮಾತನಾಡುವಾಗ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ ವೈಯಾಲಿ ಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುನಿರತ್ನ ಅವರನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ದೂರುದಾರನಿಂದ ಆಡಿಯೋ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದರು.
ಅದರಂತೆ ವಿಚಾರಣೆ ವೇಳೆ ಚಲುರಾಜು ಮತ್ತು ಮುನಿರತ್ನ ಅವರ ದನಿ ಮಾದರಿಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದರು. ಇದೀಗ ಎಫ್‌ಎಸ್‌ಎಲ್ ವರದಿ ಬಂದಿದ್ದು, ಆಡಿಯೋದಲ್ಲಿನ ದನಿ ಚಲುವರಾಜು ಮತ್ತು ಮುನಿರತ್ನ ಅವರದ್ದೇ ಎಂಬುದು ದೃಢಪಟ್ಟಿದೆ. ಹೀಗಾಗಿ ಮುನಿರತ್ನ ವಿರುದ್ಧದ ಜಾತಿ ನಿಂದನೆ ಆರೋಪಕ್ಕೆ ಬಲವಾದ ಸಾಕ್ಷ್ಯ ಸಿಕ್ಕಂತಾಗಿದೆ. ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುನಿರತ್ನ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎನ್ನಲಾಗಿದೆ.
ಪ್ರಕರಣದ ಹಿನ್ನೆಲೆ:
ಗುತ್ತಿಗೆದಾರ ಚೆಲುವರಾಜುಗೆ ಜೀವ ಬೆದರಿಕೆ ಹಾಗೂ ಹಣಕ್ಕೆ ಬೇಡಿಕೆ ಆರೋಪ ಮತ್ತು ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್‌ಗೆ ಜಾತಿ ನಿಂದನೆ ಮಾಡಿದ ಆರೋಪದಡಿ ಮಾಜಿ ಸಚಿವ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್‌ನಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದವು. ಈ ಸಂಬಂಧ ಮುನಿರತ್ನ ಅವರನ್ನು ಬಂಧಿಸಿದ್ದ ಪೊಲೀಸರು, ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬಳಿಕ ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಆರೋಪ ಮಾಡಿ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಮುನಿರತ್ನ ವಿರುದ್ಧದ ಪ್ರಕರಣಗಳ ಸಮಗ್ರ ತನಿಖೆಗಾಗಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚಿಸಿತ್ತು. ಹೀಗಾಗಿ ಮೂರು ಪ್ರಕರಣಗಳು ಎಸ್‌ಐಟಿಗೆ ವರ್ಗಾವಣೆಯಾಗಿತ್ತು. ಸದ್ಯ ಮುನಿರತ್ನ ಅವರು ತಮ್ಮ ವಿರುದ್ಧದ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರಗಿದ್ದಾರೆ.