ಸಾರಾಂಶ
ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.
ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.
ಈ ಕುರಿತು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಹೇಳಿದರು.
ಬಿಜೆಪಿಯವರು ಪ್ರಕರಣದಲ್ಲಿ ಅನಾವಶ್ಯಕವಾಗಿ ಸಚಿವರ ಹೆಸರನ್ನು ಎಳೆತಂದು ರಾಜೀನಾಮೆ ಕೊಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಸಚಿವರ ವಿರುದ್ಧ ಆರೋಪ ಮಾಡಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಪ್ರಯತ್ನ ಇದಾಗಿದೆ. ಪ್ರಕರಣದ ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು.
ಪ್ರಕರಣ ಸಿಬಿಐ ತನಿಖೆಗೆ ವಹಿಸುವಂತೆ ಬಿಜೆಪಿ ಒತ್ತಾಯದ ಕುರಿತು ಪ್ರತಿಕ್ರಿಯಿಸಿದ ಅವರು, ಡೆತ್‌ನೋಟ್‌ನಲ್ಲಿ ಎಲ್ಲೂ ಪ್ರಿಯಾಂಕ್ ಖರ್ಗೆ ಹೆಸರು ಉಲ್ಲೇಖವಾಗಿಲ್ಲ. ತನಿಖೆ ಮುಕ್ತಾಯ ಆಗುವವರೆಗೂ ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಹಾಗೆಯೇ ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ವಹಿಸಲೂ ಆಗಲ್ಲ. ನಮ್ಮ ಸಿಐಡಿ ಸಮರ್ಥವಾಗಿದೆ. ಬಿಜೆಪಿಯವರು ಹೇಳಿದ್ದನ್ನೆಲ್ಲ ಕೇಳಲು ಸಾಧ್ಯವಿಲ್ಲ. ಸಕರಾತ್ಮಕವಾಗಿ ಸಲಹೆ, ಸೂಚನೆ ನೀಡಿದರೆ ಕೇಳುತ್ತೇವೆ. ಅನಾವಶ್ಯಕವಾಗಿ ಎಲ್ಲದರಲ್ಲೂ ರಾಜಕೀಯ ಮಾಡಲು ಹೋದರೆ ಕೇಳುವುದಿಲ್ಲ ಎಂದು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವುದನ್ನು ಸಮರ್ಥಿಸಿಕೊಂಡರು.
ಬಿಜೆಪಿ ಹೇಳಿದ್ದನ್ನೆಲ್ಲಾ ನಾವು ಕೇಳಲಾಗದು
ಡೆತ್‌ನೋಟ್‌ನಲ್ಲಿ ಎಲ್ಲೂ ಪ್ರಿಯಾಂಕ್ ಖರ್ಗೆ ಹೆಸರು ಉಲ್ಲೇಖವಾಗಿಲ್ಲ. ತನಿಖೆ ಮುಕ್ತಾಯ ಆಗುವವರೆಗೂ ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಹಾಗೆಯೇ ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ವಹಿಸಲೂ ಆಗಲ್ಲ. ನಮ್ಮ ಸಿಐಡಿ ಸಮರ್ಥವಾಗಿದೆ. ಬಿಜೆಪಿಯವರು ಹೇಳಿದ್ದನ್ನೆಲ್ಲ ಕೇಳಲು ಸಾಧ್ಯವಿಲ್ಲ.
-ಡಾ.ಜಿ.ಪರಮೇಶ್ವರ್, ಗೃಹ ಸಚಿವ