ಸಾರಾಂಶ
ಬೆಂಗಳೂರು : ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿಮಂಗನಹಳ್ಳಿ ಕ್ರಾಸ್ ಬಳಿ ನಡೆದಿದೆ.
ತುಮಕೂರು ಮೂಲದ ವಿಶ್ವನಾಥ್(34) ಮೃತ ಸವಾರ. ವೃತ್ತಿಯಲ್ಲಿ ಟೈಲರ್ ಆಗಿರುವ ವಿಶ್ವನಾಥ್, ಕೆಲ ವರ್ಷಗಳಿಂದ ಸುಂಕದಕಟ್ಟೆಯ ಬಾಡಿಗೆ ಮನೆಯಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. ಭಾನುವಾರ ರಾತ್ರಿ ಕೆಂಗೇರಿ ಕಡೆಯಿಂದ ಸುಂಕದಕಟ್ಟೆ ಕಡೆಗೆ ದ್ವಿಚಕ್ರ ವಾಹನದಲ್ಲಿ ವೇಗವಾಗಿ ತೆರಳುವಾಗ ಮಂಗನಹಳ್ಳಿ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಸೋಮವಾರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.