ಸಾರಾಂಶ
ಬೆಂಗಳೂರು ; ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಮಹದೇವಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿನ್ನಯ್ಯನಪಾಳ್ಯ ನಿವಾಸಿ ಶ್ರೀಕಾಂತ್(28) ಮೃತ ಸವಾರ. ಸೋಮವಾರ ಮುಂಜಾನೆ ಸುಮಾರು 1.30ಕ್ಕೆ ಹೂಡಿ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕಚೇರಿ ಸಹಾಯಕನಾಗಿದ್ದ ಶ್ರೀಕಾಂತ್ ಭಾನುವಾರ ರಾತ್ರಿ ಕುಟುಂಬದ ಜತೆಗೆ ತಮ್ಮ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬ ಆಚರಿಸಿದ್ದಾರೆ. ಬಳಿಕ ಸ್ನೇಹಿತರ ಜತೆಗೆ ಪಾರ್ಟಿ ಮುಗಿಸಿಕೊಂಡು ಮುಂಜಾನೆ ದ್ವಿಚಕ್ರ ವಾಹನದಲ್ಲಿ ಬರುವಾಗ ಹೂಡಿ ಮೆಟ್ರೋ ನಿಲ್ದಾಣದ ಬಳಿ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಬಿದ್ದ ಶ್ರೀಕಾಂತ್, ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾರ್ವಜನಿಕರು ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದ್ದ ಹಿನ್ನೆಲೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.