ಸಾರಾಂಶ
ಬೆಂಗಳೂರು : ಹಿಂದಿನಿಂದ ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸವಾರ ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಹಾಲಕ್ಷ್ಮಿ ಲೇಔಟ್ ಬಳಿಯ ಕೃಷ್ಣಾನಂದನಗರ ನಿವಾಸಿ ಪ್ರಸಾದ್ (38) ಮೃತ ಸವಾರ. ತುಮಕೂರು-ಬೆಂಗಳೂರು ಹೆದ್ದಾರಿಯ ಜಾಲಹಳ್ಳಿ ಸಮೀಪದ ರಾಕ್‌ಲೈನ್ ಮಾಲ್ ಬಳಿಯ ಮೇಲ್ಸೇತುವೆಯಲ್ಲಿ ಶನಿವಾರ ಬೆಳಗ್ಗೆ ಸುಮಾರು 6.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.
ಮೃತ ಸವಾರ ಪ್ರಸಾದ್ ದಾಸನಪುರದ ಎಪಿಎಂಪಿ ಮಾರುಕಟ್ಟೆಯಲ್ಲಿ ಸಗಟು ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ರಾತ್ರಿ ಅಂಗಡಿಯಲ್ಲಿ ಕೆಲಸ ಮುಗಿಸಿಕೊಂಡು ಶನಿವಾರ ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ಬರುತ್ತಿದ್ದರು. ಈ ವೇಳೆ ಜಾಲಹಳ್ಳಿಯ ರಾಕ್‌ಲೈನ್ ಮಾಲ್ ಬಳಿಯ ಮೇಲ್ಸೇತುವೆಯಲ್ಲಿ ಬರುವಾಗ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ಪ್ರಸಾದ್ ಮೇಲ್ಸೇತುವೆಯಿಂದ ಕೆಳ ರಸ್ತೆಗೆ ಹಾರಿ ಬಿದ್ದ ಪರಿಣಾಮ ತೀವ್ರಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತದ ಬಳಿಕ ಚಾಲಕ ಕಾರಿನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಕಾರನ್ನು ಪತ್ತೆ ಹಚ್ಚಲಾಗಿದ್ದು, ಶೀಘ್ರದಲ್ಲೇ ಚಾಲಕನನ್ನು ಬಂಧಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.