ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಪಾದಾಚಾರಿ ಮಾರ್ಗದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಾಜಿನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು : ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಪಾದಾಚಾರಿ ಮಾರ್ಗದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಾಜಿನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಲಗ್ಗೆರೆ ಚೌಡೇಶ್ವರಿನಗರ ನಿವಾಸಿ ನಿತಿನ್‌(24) ಮೃತ ಸವಾರ. ಹಿಂಬದಿ ಸವಾರ ಹೃದಯ್‌(24) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಬುಧವಾರ ಮುಂಜಾನೆ ಸುಮಾರು 2.45ಕ್ಕೆ ಹೊರವರ್ತುಲ ರಸ್ತೆಯ ಕೂಲಿನಗರ ಸೇತುವೆ ಬಳಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸವಾರ ನಿತಿನ್‌ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಈತನ ಸ್ನೇಹಿತ ಹೃದಯ್‌ ಫ್ಲವರ್‌ ಡೆಕೋರೇಶನ್‌ ಕೆಲಸ ಮಾಡುತ್ತಿದ್ದ. ಈ ಇಬ್ಬರು ಸ್ನೇಹಿತರು ಬುಧವಾರ ಮುಂಜಾನೆ ದ್ವಿಚಕ್ರ ವಾಹನದಲ್ಲಿ ಹೊರವರ್ತುಲ ರಸ್ತೆಯ ಕೂಲಿನಗರ ಸೇತುವೆ ಬಳಿ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆಯ ಎಡಭಾಗದ ಪಾದಾಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸವಾರರು ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಸವಾರ ನಿತಿನ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಹೃದಯ್‌ನನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ದ್ವಿಚಕ್ರ ವಾಹನವನ್ನು ಅತಿವೇಗವಾಗಿ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಅಪಘಾತವಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ರಾಜಾಜಿನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.