ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರ ಸಂಚಾರ ಪಶ್ಚಿಮ ವಿಭಾಗದ ಪೊಲೀಸರು ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ವ್ಹೀಲಿಂಗ್ ಮಾಡುವ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ 8 ಪ್ರಕರಣ ದಾಖಲಿಸಿದ್ದಾರೆ.ಫೆ.22 ಮತ್ತು 23ರಂದು ನಡೆದ ವಿಶೇಷ ಕಾರ್ಯಾಚರಣೆ ವೇಳೆ ಕೆಂಗೇರಿ 03, ಬ್ಯಾಟರಾಯನಪುರ 02, ಕಾಮಾಕ್ಷಿಪಾಳ್ಯ, ಅಶೋಕನಗರ, ವಿಜಯನಗರ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಲಾ 1 ಸೇರಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿ, 8 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಎಂಟು ಆಯಾಯ ಸಂಚಾರ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದ್ದು, ವ್ಹೀಲಿಂಗ್ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಬಿ.ಹದ್ದಣ್ಣವರ್ ತಿಳಿಸಿದ್ದಾರೆ.
ಇಬ್ಬರ ಬಂಧನ: ಇನ್ನು ನಗರದ ಸುರಂಜನ್‌ದಾಸ್ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಸವಾರರನ್ನು ಜೀವನಭೀಮಾನಗರ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮೋಹಿತ್ ಕುಮಾರ್(21) ಮತ್ತು ವಿಘ್ನೇಶ್(19) ಬಂಧಿತರು. ಫೆ.23ರಂದು ಸಂಚಾರ ಪೊಲೀಸರು ದ್ವಿಚಕ್ರ ವಾಹನ ವ್ಹೀಲಿಂಗ್ ಮಾಡುವವರ ಪತ್ತೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಸುರಂಜನ್‌ದಾಸ್ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಸವಾರರನ್ನು ವಶಕ್ಕೆ ಪಡೆದು, ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಜೀವನ ಭೀಮಾನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.