ಸಾರಾಂಶ
ಅಂಡಮಾನ್ ನಿಕೋಬಾರ್ ಮೂಲದ ಓರ್ವ ಯುವತಿ ತಲೆಗೆ ಪೆಟ್ಟು ಬಿದ್ದು ತೀವ್ರವಾಗಿ ಗಾಯಗೊಂಡಿದ್ದು ನಿಮಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದ ಮೂವರಿಗೆ ಚನ್ನಪಟ್ಟಣ ಸಮೀಪದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.
ಮದ್ದೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಇಬ್ಬರು ಯುವತಿಯರು ಸೇರಿದಂತೆ ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ನಿಡಘಟ್ಟ ಸಮೀಪದ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸೋಮವಾರ ಮಧ್ಯಾಹ್ನ ಜರುಗಿದೆ.
ಅಂಡಮಾನ್ ನಿಕೋಬಾರ್ ಮೂಲದ ನಾಲ್ವರ ಪೈಕಿ ಓರ್ವ ಯುವತಿ ತಲೆಗೆ ಪೆಟ್ಟು ಬಿದ್ದು ತೀವ್ರವಾಗಿ ಗಾಯಗೊಂಡಿದ್ದು ಆಕೆಯನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದ ಮೂವರಿಗೆ ಚನ್ನಪಟ್ಟಣ ಸಮೀಪದ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಗಾಯಾಳುಗಳು ಹೆಸರು ತಿಳಿದು ಬಂದಿಲ್ಲ.
ಬೆಂಗಳೂರಿನಲ್ಲಿ ವಾಸವಿರುವ ಅಂಡಮಾನ್ ನಿಕೋಬಾರ್ ಮೂಲದವರು ವಾರದ ರಜೆ ಹಿನ್ನೆಲೆಯಲ್ಲಿ ಮೈಸೂರು ಪ್ರವಾಸಕ್ಕೆ ತೆರಳಿದ್ದರು ಎಲ್ಲರೂ ಬೆಂಗಳೂರಿಗೆ ವಾಪಸ್ ಆಗುತ್ತಿದ್ದರು. ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ನಿಡಘಟ್ಟ ಸಮೀಪದ ಅಣ್ಣೇಗೌಡರ ಪೆಟ್ರೋಲ್ ಬ್ಯಾಂಕ್ ಎದುರು ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ನಂತರ ಕಾರಿನ ಮುಂಭಾಗದ ಚಕ್ರಗಳು ಡಿಸ್ಕ್ ಸಮೇತ ಕಿತ್ತು ಬಂದ ರಭಸಕ್ಕೆ ಕಾರು ನಾಲ್ಕೈದು ಬಾರಿ ಉರುಳಿ ಬಿದ್ದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಸ್ಥಳಕ್ಕೆ ಧಾವಿಸಿದ ಸಂಚಾರಿ ಠಾಣೆ ಪೊಲೀಸರು ಕ್ರೇನ್ ಸಹಾಯದಿಂದ ಕಾರನ್ನು ರಸ್ತೆಯಿಂದ ತೆರವು ಮಾಡಿದರು. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.