ಸಾರಾಂಶ
ನಕಲಿ ಕೀ ಬಳಸಿ ಕಾರು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ನಕಲಿ ಕೀ ಬಳಸಿ ಕಾರು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳ ಮೂಲದ ಜಮಾಲುದ್ದೀನ್(30) ಬಂಧಿತ. ಆರೋಪಿಯಿಂದ ₹6 ಲಕ್ಷ ಮೌಲ್ಯದ ಕಾರನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಬೆಳ್ಳಂದೂರು ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರು ಮನೆ ಎದುರು ನಿಲುಗಡೆ ಮಾಡಿದ್ದ ಕಾರು ಕಳುವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಜಮಾಲುದ್ದೀನ್ 8 ತಿಂಗಳ ಹಿಂದೆ ಬೆಳ್ಳಂದೂರಿನಲ್ಲಿ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಬಳಿಕ ಕೆಲಸ ಬಿಟ್ಟಿದ್ದ. ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಕಾರು ಕಳ್ಳತನಕ್ಕೆ ಇಳಿದಿದ್ದ. ನಕಲಿ ಕೀ ಮಾಡಿಸಿಕೊಂಡಿದ್ದ ಆರೋಪಿಯು ವ್ಯಕ್ತಿಯೊಬ್ಬರು ಮನೆ ಎದುರು ನಿಲುಗಡೆ ಮಾಡಿದ್ದ ಕಾರನ್ನು ಕಳ್ಳತನ ಮಾಡಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣದ ದಾಖಲಿಸಿಕೊಂಡು ತನಿಖೆ ಮಾಡಿ ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಬೆಳ್ಳಂದೂರು ಮೇಲ್ಸೇತುವೆ ಬಳಿ ಕಾರು ಸಮೇತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.ವಿಚಾರಣೆ ವೇಳೆ ಆರೋಪಿಯು ಕಾರು ಕಳ್ಳತನ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ನ್ಯಾಯಾಲಯದ ಆದೇಶದ ಮೇರೆಗೆ ಆರೋಪಿಯನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.