ಮಹಿಳೆಯರ ಸರ ಕಳವು ಹಾಗೂ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಕಳ್ಳನ ಬಂಧನ: ಚಿನ್ನ, ವಾಹನಗಳು ವಶ

| Published : Sep 14 2024, 02:00 AM IST / Updated: Sep 14 2024, 04:43 AM IST

ಸಾರಾಂಶ

ಬೆಂಗಳೂರಿನಲ್ಲಿ ಮಹಿಳೆಯರ ಸರ ಕಳವು ಮತ್ತು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.  

 ಬೆಂಗಳೂರು : ಮಹಿಳೆಯರ ಸರ ಕಳವು ಹಾಗೂ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಕಳ್ಳನೊಬ್ಬನನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಕೃಷ್ಣಗಿರಿ ಮೂಲದ ರಮೇಶ್‌ ಅಲಿಯಾಸ್‌ ರಾಮು(24) ಬಂಧಿತ. ಆರೋಪಿಯಿಂದ ₹10 ಲಕ್ಷ ಮೌಲ್ಯದ 6 ಗ್ರಾಂ ತೂಕದ ಚಿನ್ನದ ಸರ, ನಾಲ್ಕು ದ್ವಿಚಕ್ರ ವಾಹನ ಹಾಗೂ ಒಂದು ಆಟೋರಿಕ್ಷಾ ಜಪ್ತಿ ಮಾಡಲಾಗಿದೆ.

ತಲಘಟ್ಟಪುರದ ಮನವರ್ತೆ ಕಾವಲ್‌ ಶೋಭಾ ಹಿಲ್ ವ್ಯೂ ಅಪಾರ್ಟ್‌ಮೆಂಟ್‌ ನಿವಾಸಿ ಸುವರ್ಣ ಎಂಬುವವರು ಆ.27ರಂದು ಸಂಜೆ ಕಲ್ಯಾಣ ಮಂಟಪದ ಎದುರಿನ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೂರು ದಾಖಲಾದ ಬೆನ್ನಲ್ಲೇ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದಾಗಿದ್ದರು. ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ವೇಳೆ ಆರೋಪಿಯ ಸುಳಿವು ಸಿಕ್ಕಿದೆ. ಈ ಸುಳಿವು ಆಧರಿಸಿ ಆರೋಪಿಯ ಪತ್ತೆಗೆ ಪೊಲೀಸರು ತಲಾಶ್‌ ನಡೆಸುವಾಗ ಸೆ.5ರಂದು ಅಂಚೆಪಾಳ್ಯದ ಬೃಂದಾವನ ಲೇಔಟ್‌ನಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಸರಗಳವು ತಾನೇ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಆರೋಪಿ ವಿರುದ್ಧ 28 ಪ್ರಕರಣ ದಾಖಲು:

ಆರೋಪಿ ರಮೇಶ್‌ ಅಪರಾಧ ಹಿನ್ನೆಲೆವುಳ್ಳವನಾಗಿದ್ದಾನೆ. ಡಿಪ್ಲೊಮಾ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವ್ಯಾಸಂಗ ಮಾಡಿರುವ ಆರೋಪಿಯು, ಡೆಲಿವರಿ ಬಾಯ್‌ ಕೆಲಸ ಮಾಡುತ್ತಾನೆ. ಮೋಜು-ಮಸ್ತಿಗೆ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದಾನೆ. ಈತನ ವಿರುದ್ಧ ಈ ಹಿಂದೆ ನಗರದ ರಾಜರಾಜೇಶ್ವರಿನಗರ, ಕೆಂಗೇರಿ, ಚಂದ್ರಾಲೇಔಟ್‌, ಜ್ಞಾನಭಾರತಿ, ಕೋಣನಕುಂಟೆ, ರಾಜಗೋಪಾಲನಗರ, ಹುಳಿಮಾವು, ಮಲ್ಲೇಶ್ವರ ಸೇರಿದಂತೆ ವಿವಿಧ ಪೊಲೀಸ್‌ ಠಾಣೆಗಳಲ್ಲಿ 28 ಅಪರಾಧ ಪ್ರಕರಣಗಳು ದಾಖಲಾಗಿವೆ. ಹಲವು ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ಆರೋಪಿಯು ಜಾಮೀನು ಪಡೆದು ಹೊರಬಂದ ಬಳಿಕವೂ ತನ್ನ ಕಳವು ಚಾಳಿ ಮುಂದುವರೆಸಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.

ಮುಂದುವರೆದ ವಿಚಾರಣೆಯಲ್ಲಿ ಆರೋಪಿ ರಮೇಶ್‌ ನೀಡಿದ ಮಾಹಿತಿ ಮೇರೆಗೆ ಆನೇಕಲ್‌ನ ಜುವೆಲ್ಲರಿ ಅಂಗಡಿಯಲ್ಲಿ ಮಾರಾಟ ಮಾಡಿದ್ದ ಮಾಂಗಲ್ಯ ಸರವನ್ನು ಜಪ್ತಿ ಮಾಡಲಾಗಿದೆ. ಬಳಿಕ ಅಂಚೆಪಾಳ್ಯದ ಬೃಂದಾವನ ಲೇಔಟ್‌ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿದ್ದ ನಾಲ್ಕು ದ್ವಿಚಕ್ರ ವಾಹನ ಹಾಗೂ ಒಂದು ಆಟೋರಿಕ್ಷಾ ಜಪ್ತಿ ಮಾಡಿದ್ದಾರೆ.

ಆರು ಕಳವು ಪ್ರಕರಣ ಪತ್ತೆ

ಈತನ ಬಂಧನದಿಂದ ತಲಘಟ್ಟಪುರದ ಠಾಣೆಯ ಒಂದು ಸರಗಳವು ಪ್ರಕರಣ, ಆಟೋರಿಕ್ಷಾ ಕಳವು, ಬ್ಯಾಟರಾಯನಪುರ ಮತ್ತು ಬನ್ನೇರುಘಟ್ಟ ಠಾಣೆಯ ತಲಾ ಒಂದು ದ್ವಿಚಕ್ರ ವಾಹನ ಕಳವು ಹಾಗೂ ಕುಂಬಳಗೋಡು ಠಾಣೆಯಲ್ಲಿ ದಾಖಲಾಗಿದ್ದ ಎರಡು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.