ಸಾರಾಂಶ
ಎರಡು ಕ್ಯಾಂಟರ್ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕೂಲಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಹುಳಿಮಾವು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು : ಎರಡು ಕ್ಯಾಂಟರ್ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕೂಲಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಹುಳಿಮಾವು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಮಿಳುನಾಡಿನ ಈರೋಡ್ ಮೂಲದ ಮುರುಗನ್ (62) ಮೃತ ಕಾರ್ಮಿಕ. ನೈಸ್ ರಸ್ತೆಯ ಟಿ.ಜಾನ್ ಕಾಲೇಜು ಎದುರು ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ.
ಟಿ.ಜಾನ್ ಕಾಲೇಜು ಬಳಿ ಚಲಿಸುತ್ತಿದ್ದ ಚಿಕ್ಕ ಕ್ಯಾಂಟರ್ ವಾಹನಕ್ಕೆ ಹಿಂದಿನಿಂದ ಬಂದ ಮತ್ತೊಂದು ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದ್ದು, ಚಿಕ್ಕ ಕ್ಯಾಂಟರ್ ವಾಹನದಲ್ಲಿ ಮಲಗಿದ್ದ ಕಾರ್ಮಿಕ ಮುರುಗನ್ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಮುರುಗನ್ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಅಪಘಾತದಲ್ಲಿ ನಜ್ಜುಗುಜ್ಜಾಗಿದ್ದ ಎರಡೂ ಕ್ಯಾಂಟರ್ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಹುಳಿಮಾವು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.