ಸಾರಾಂಶ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿರುವ ಹೈಕೋರ್ಟ್, ಯಾರಾದರೂ ‘ಜೈ ಶ್ರೀರಾಮ್’ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತದೆ ಎಂಬುದು ಹೇಗೆಂದು ಅರ್ಥವಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಹಾಗೂ ಸ್ಥಳೀಯ ಜೆಎಂಎಫ್‌ಸಿ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶಿಸಿದೆ.
ಕಡಬ ತಾಲೂಕು ಐತ್ತೂರು ಗ್ರಾಮದ ಮರ್ಧಾಳ ಎಂಬಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿಯ ಆವರಣಕ್ಕೆ 2024ರ ಸೆ.24ರಂದು ರಾತ್ರಿ ಸುಮಾರು 10.50ರ ಸಮಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ ಮತ್ತು ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ ಆರೋಪ ಅರ್ಜಿದಾರರ ಮೇಲಿದೆ. ಈ ಕುರಿತು ಮಸೀದಿ ಸಿಬ್ಬಂದಿಗಳು ಕಡಬ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.
ಈ ದೂರಿನ ಅನ್ವಯ ಮಸೀದಿಗೆ ಅತಿಕ್ರಮಣ ಪ್ರವೇಶ, ಜೀವ ಬೆದರಿಕೆ, ಧರ್ಮವನ್ನು ಅವಮಾನಿಸಿದ ಮತ್ತು ಧಾರ್ಮಿಕ ನಂಬಿಕೆ-ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಅರ್ಜಿದಾರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣವನ್ನು ಸ್ಥಳೀಯ ಜೆಎಂಎಫ್‌ಸಿ ಕೋರ್ಟ್ ವಿಚಾರಣೆ ನಡೆಸುತ್ತಿತ್ತು. ಇದರಿಂದ ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿ ಪುರಸ್ಕರಿಸಿರುವ ಹೈಕೋರ್ಟ್, ದೂರುದಾರರು ನೆಲೆಸಿರುವ ಭಾಗದಲ್ಲಿ ಹಿಂದೂ- ಮುಸ್ಲಿಮರು ಒಟ್ಟಾಗಿ ಸೌರ್ಹಾದತೆಯಿಂದ ಜೀವಿಸುತ್ತಿರುವುದಾಗಿ ದೂರಿನಲ್ಲಿಯೇ ಹೇಳಲಾಗಿದೆ. ಆದರೆ, ಅರ್ಜಿದಾರರ ವಿರುದ್ಧ ಧಾರ್ಮಿಕ ಭಾವನೆಗೆ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ, ಕೆರಳಿಸಿದ ಆರೋಪ ಮೇಲೆ ಐಪಿಸಿ ಸೆಕ್ಷನ್ 295ಎ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಸೆಕ್ಷನ್ 295A ಪ್ರಕಾರ ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು, ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು, ಕೆರಳಿಸುವುದು ಅಪರಾಧ ಕೃತ್ಯವಾಗುತ್ತದೆ.
ಈ ಯಾರಾದರೂ ‘ಜೈ ಶ್ರೀರಾಮ್’ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುವುದಿಲ್ಲ. ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ. ಹೀಗಿರುವಾಗ ಅರ್ಜಿದಾರರ ವಿರುದ್ಧ ಪ್ರಕರಣದ ವಿಚಾರಣೆ ಮುಂದುವರಿಸಲು ಅನುಮತಿ ನೀಡುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.