ಸಾರಾಂಶ
ಬೆಂಗಳೂರು :ದುಷ್ಕರ್ಮಿಯೊಬ್ಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ವರ್ಗಾವಣೆ ಸ್ಥಳ ನಿರೀಕ್ಷಣೆಯಲ್ಲಿದ್ದ ಮಹಿಳಾ ಎಂಜಿನಿಯರೊಬ್ಬರನ್ನು ಬೆದರಿಸಿ ₹80 ಸಾವಿರ ಸುಲಿಗೆ ಮಾಡಿದ ಆರೋಪದಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ। ನಾಗರಾಜ್ ಎಂಬುವವರು ನೀಡಿದ ದೂರಿನ ಮೇರೆಗೆ ರಘುನಂದನ್ ಎಂಬ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಪೊಲೀಸರು ಆರೋಪಿಗಾಗಿ ಶೋಧಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಚಳ್ಳಕೆರೆ ಉಪ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎನ್.ಕಾವ್ಯಾ ಸ್ಥಳ ನಿರೀಕ್ಷಣೆಯಲ್ಲಿದ್ದರು. ರಘುನಂದನ್ ಎಂಬ ವ್ಯಕ್ತಿಯು ಕಾವ್ಯಾ ಅವರಿಗೆ ಕರೆ ಮಾಡಿ ತಾನು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಸಹಾಯಕ ಹಾಗೂ ವಿಶೇಷಾಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ.
ಬಳಿಕ ನಿಮ್ಮ ವರ್ಗಾವಣೆಗಾಗಿ ₹2 ಲಕ್ಷ ನೀಡಬೇಕು ಎಂದು ಬೇಡಿಕೆ ಇರಿಸಿ ಬೆದರಿಸಿದ್ದಾನೆ. ಅ.15 ಮತ್ತು 16ರಂದು ಕಾವ್ಯಾ ಅವರಿಂದ ಒಟ್ಟು ₹80 ಸಾವಿರವನ್ನು ಫೋನ್ ಪೇ ಮುಖಾಂತರ ವರ್ಗಾಯಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಈತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.