ಆಲೆಮನೆಯಲ್ಲಿ ಪಟಾಕಿ ಸ್ಫೋಟಗೊಂಡು ತಮಿಳುನಾಡು ಮೂಲದ ಕಾರ್ಮಿಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಆಲೆಮನೆಯಲ್ಲಿ ಪಟಾಕಿ ಸ್ಫೋಟಗೊಂಡು ತಮಿಳುನಾಡು ಮೂಲದ ಕಾರ್ಮಿಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಮಿಳುನಾಡು ಮೂಲದ ರಮೇಶ್‌ (45) ಮೃತ ಕಾರ್ಮಿಕ. ನಾಗಲಿಂಗ (55) ತೀವ್ರವಾಗಿ ಗಾಯಗೊಂಡಿದ್ದು, ಮತ್ತೊಬ್ಬ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.

ಜಿ.ಕೆಬ್ಬಹಳ್ಲಿ ಗ್ರಾಮದಲ್ಲಿ ಶ್ರೀಕಾಲಭೈರವೇಶ್ವರ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿತ್ತು. ಹಬ್ಬ ಆಚರಣೆ ವೇಳೆ ಪಟಾಕಿ ಸಿಡಿಸುವ ಜವಾಬ್ದಾರಿಯನ್ನು ತಮಿಳುನಾಡು ಮೂಲದ ನಾಲ್ವರು ವ್ಯಕ್ತಿಗಳಿಗೆ ನೀಡಲಾಗಿತ್ತು. ಅದರಂತೆ ನಾಲ್ವರು ಗ್ರಾಮಕ್ಕೆ ಬಂದು ಆಲೆಮನೆಯೊಂದರಲ್ಲಿ ವಾಸ್ತವ್ಯವಿದ್ದರು. 

ಭಾನುವಾರ ರಾತ್ರಿಯೇ ಹಬ್ಬ ಮುಕ್ತಾಯವಾಗಿತ್ತು. ಸೋಮವಾರ ಬೆಳಗ್ಗೆ ಅಲೆಮನೆಯಲ್ಲಿ ಮೂವರು ಕಾರ್ಮಿಕರು ನಿದ್ರೆ ಮಾಡುತ್ತಿದ್ದ ವೇಳೆ ಮತ್ತೊಬ್ಬ ಮದ್ದು ತುಂಬುವ ಕಾರ್ಯದಲ್ಲಿ ತೊಡಗಿದ್ದನು. ಈ ಸಮಯದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡರು.

ಸ್ಫೋಟದ ರಭಸಕ್ಕೆ ಅಲೆಮನೆಯ ಹೆಂಚುಗಳು ಹಾರಿ ಹೋಗಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ರಮೇಶ್ ಸ್ಥಳದಲ್ಲಿಯೇ ಮೃತಪಟ್ಟರೆ, ನಾಗಲಿಂಗ ಎಂಬಾತನಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 

ಗಾಯಾಳುಗಳನ್ನು ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಭೇಟಿ ನೀಡಿ ಪರಿಶೀಲಿಸಿದರು. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.