ಸಾರಾಂಶ
ಬೆಂಗಳೂರು : ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ನಂಬಿಸಿ 8.41 ಕೋಟಿ ರು. ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣ ಸಂಬಂಧ ಶನಿವಾರ (ಡಿ.28) ವಿಚಾರಣೆಗೆ ಹಾಜರಾಗುವಂತೆ ಪ್ರಮುಖ ಆರೋಪಿ ಐಶ್ವರ್ಯಾ ಗೌಡ ಸೇರಿ ಮೂವರು ಆರೋಪಿಗಳಿಗೂ ಚಂದ್ರಾಲೇಔಟ್ ಠಾಣೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.
ಪ್ರಮುಖ ಆರೋಪಿ ಐಶ್ವರ್ಯಾ ಗೌಡ, ಆಕೆಯ ಪತಿ ಕೆ.ಎನ್.ಹರೀಶ್, ಚಿತ್ರನಟ ಧರ್ಮೇಂದ್ರಗೆ ಶನಿವಾರ ಬೆಳಗ್ಗೆ 11 ಗಂಟೆಗೆ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಗೈರು ಹಾಜರಾದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.
ಪ್ರಕರಣ ಹಿನ್ನೆಲೆ:
ವಾರಾಹಿ ವಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿ ಮಾಲೀಕರಾದ ವನಿತಾ ಐತಾಳ್ ಎಂಬುವವರು ಈ ಮೂವರ ವಿರುದ್ಧ ಡಿ.23ರಂದು ಚಂದ್ರಾ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಮೂವರು ಮೋಸ ಮಾಡುವ ಉದ್ದೇಶದಿಂದ 8.41 ಕೋಟಿ ರು. ಮೌಲ್ಯದ 14.6 ಕೆ.ಜಿ. ಚಿನ್ನಾಭರಣ ಸಾಲ ಪಡೆದು ಬಳಿಕ ಹಣ ನೀಡದೆ ನಂಬಿಕೆ ದ್ರೋಹ ಮಾಡಿ ವಂಚಿಸಿದ್ದಾರೆ. ಹಣ ವಾಪಸ್ ಕೇಳಿದರೆ, ಬೈದು ಪ್ರಾಣ ಬೆದರಿಕೆ ಹಾಕಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ರಾಜಕಾರಣಿಗಳ ಹೆಸರಿನಲ್ಲಿ ಕರೆ ಮಾಡಿಸಿ ವಂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು. ಈ ಸಂಬಂಧ ನೋಟಿಸ್ ನೀಡಿದ ಈ ಮೂವರ ವಿರುದ್ಧ ಎಫ್ಐಆರ್ ದಾಖಲಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.