ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ನಟಿ ರನ್ಯಾರಾವ್‌ಗೆ ಈಗ ಇ.ಡಿ. ಸಂಕಷ್ಟ ಎದುರಾಗಿದೆ. ನಗರದ ಪಿಎಂಎಲ್‌ಎ ವಿಶೇಷ ನ್ಯಾಯಾಲಯ ಪ್ರಕರಣದ ವಿಚಾರಣೆ ಆರಂಭಿಸಿದ್ದು, ಪ್ರಮುಖ ಆರೋಪಿ ನಟಿ ರನ್ಯಾ ರಾವ್ ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಪ್ರಕರಣ ಸಂಬಂಧ ನ್ಯಾಯಾಲಯವು ಚಾರ್ಜ್ ಫ್ರೇಮ್ ಪ್ರಕ್ರಿಯೆ ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿ ರನ್ಯಾ ರಾವ್ ನ್ಯಾಯಾಲಯಕ್ಕೆ ಹಾಜರಾಗಿ ಚಾರ್ಜ್ ಫ್ರೇಮ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಪ್ರಕರಣ ಸಂಬಂಧ ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದ ರನ್ಯಾ ರಾವ್, ಬುಧವಾರವಷ್ಟೇ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು.
ಪ್ರಕರಣದ ಹಿನ್ನೆಲೆ:
2025ರ ಮಾ.3ರಂದು ವಿದೇಶದಿಂದ ₹12.56 ಕೋಟಿ ಮೌಲ್ಯದ 14 ಕೆ.ಜಿ. ಚಿನ್ನ ಕಳ್ಳ ಸಾಗಣೆ ಮಾಡುವಾಗ ನಟಿ ರನ್ಯಾ ರಾವ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಬಳಿಕ ಆಕೆಯ ಮನೆ ಮೇಲೆ ದಾಳಿ ನಡೆಸಿ ಶೋಧಿಸಿದಾಗ ₹2.06 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ₹2.67 ಕೋಟಿ ನಗದು ಪತ್ತೆಯಾಗಿದ್ದು, ಅದನ್ನು ಜಪ್ತಿ ಮಾಡಲಾಗಿತ್ತು. ಬಳಿಕ, ಈಕೆಯ ಸಹಚರರಾದ ಸಾಹಿಲ್ ಸಕಾರಿಯಾ ಜೈನ್, ಭರತ್ ಕುಮಾರ್ ಜೈನ್ ಮತ್ತು ತರುಣ್ ಕೊಂಡರಾಜು ಅವರನ್ನು ಬಂಧಿಸಲಾಗಿತ್ತು. ಈ ಸಂಬಂಧ ಡಿಆರ್‌ಐ ಮತ್ತು ಸಿಬಿಐ ದಾಖಲಿಸಿದ್ದ ಎಫ್ಐಆರ್ ಆಧಾರದ ಮೇಲೆ ಇ.ಡಿ.(ಜಾರಿ ನಿರ್ದೇಶನಾಲಯ) ಪ್ರಕರಣದ ತನಿಖೆ ಆರಂಭಿಸಿತ್ತು.
127 ಕೆ.ಜಿ. ಕಳ್ಳಸಾಗಣೆ
ಆರೋಪಿಗಳು ಒಂದು ವರ್ಷದ ಅವಧಿಯಲ್ಲಿ ಸುಮಾರು ₹102.55 ಕೋಟಿ ಮೌಲ್ಯದ ಬರೋಬ್ಬರಿ 127 ಕೆ.ಜಿ. ಕಳ್ಳಸಾಗಣೆ ಮಾಡಿರುವುದು ಇ.ಡಿ.ತನಿಖೆಯಲ್ಲಿ ಬಯಲಾಗಿತ್ತು. ಈ ಸಂಬಂಧ ನಾಲ್ವರು ಆರೋಪಿಗಳ ವಿರುದ್ಧ ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಇದೀಗ ನ್ಯಾಯಾಲಯವು ವಿಚಾರಣೆ ಆರಂಭಿಸಿದೆ.
