ಕಾರಿಗೆ ಗೂಡ್ಸ್ ಕ್ಯಾಂಟರ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು, ಆಸ್ಪತ್ರೆಯಲ್ಲಿ ಓರ್ವ ಸಾವು

| Published : Jul 12 2024, 01:32 AM IST / Updated: Jul 12 2024, 05:14 AM IST

ಕಾರಿಗೆ ಗೂಡ್ಸ್ ಕ್ಯಾಂಟರ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು, ಆಸ್ಪತ್ರೆಯಲ್ಲಿ ಓರ್ವ ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ಎದುರಿನಿಂದ ಬರುತ್ತಿದ್ದ ಕಾರಿಗೆ ಗೂಡ್ಸ್ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಹಾಗೂ ಆಸ್ಪತ್ರೆಯಲ್ಲಿ ಓರ್ವ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ತಾಲೂಕಿನ ಎ.ಶ್ರೀರಾಮನಹಳ್ಳಿ ಬಳಿ ಬುಧವಾರ ತಡರಾತ್ರಿ ಸಂಭವಿಸಿದೆ.

 ನಾಗಮಂಗಲ :  ಎದುರಿನಿಂದ ಬರುತ್ತಿದ್ದ ಕಾರಿಗೆ ಗೂಡ್ಸ್ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಹಾಗೂ ಆಸ್ಪತ್ರೆಯಲ್ಲಿ ಓರ್ವ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ತಾಲೂಕಿನ ಎ.ಶ್ರೀರಾಮನಹಳ್ಳಿ ಬಳಿ ಬುಧವಾರ ತಡರಾತ್ರಿ ಸಂಭವಿಸಿದೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಅರಸನಘಟ್ಟ ಗ್ರಾಮದ ಪರಮೇಶ್ವರಪ್ಪನ ಪುತ್ರ ಎ.ಪಿ.ಯುವರಾಜ್ (45), ಹಿರೇಮೆನೂರು ಗ್ರಾಮದ ಹಾಲೇಶಪ್ಪನ ಪುತ್ರ ಸಿದ್ದೇಶ್ (32) ಸ್ಥಳದಲ್ಲೇ ಸಾವನ್ನಪ್ಪಿದರೆ, ಇದೇ ತಾಲೂಕಿನ ಗ್ಯಾರಹಳ್ಳಿ ನಾರಪ್ಪ ಪುತ್ರ ಜಿ.ಎನ್.ತಿಪ್ಪೇಸ್ವಾಮಿ (52) ಚಿಕಿತ್ಸೆ ಫಲಕಾರಿಯಾಗದೆ ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಟರಾಜ್ ಎಂಬುವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಹೊಳಲ್ಕೆರೆ ತಾಲೂಕಿನ ವಿವಿಧ ಗ್ರಾಮಗಳ ವ್ಯವಸಾಯ ಸೇವಾ ಸಹಕಾರ ಸಂಘಗಳಲ್ಲಿ ಕಾರ್ಯದರ್ಶಿಗಳಾಗಿದ್ದ ಆರು ಮಂದಿ ಕಾರ್ಯನಿಮಿತ್ತ ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದರು. ಈ ವೇಳೆ ಮೈಸೂರಿನಿಂದ ನಾಗಮಂಗಲ ಕಡೆಗೆ ಬರುತ್ತಿದ್ದ ಗೂಡ್ಸ್ ಕ್ಯಾಂಟರ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡು ಸ್ಥಳದಲ್ಲೇ ಇಬ್ಬರು, ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದರೆ, ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ. ಇನ್ನುಳಿದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಕಳುಹಿಸಿಕೊಟ್ಟು, ಸ್ಥಳದಲ್ಲೇ ಸಾವನ್ನಪ್ಪಿದ್ದ ಇಬ್ಬರ ಮೃತದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೊಳಪಡಿಸಿದರು.

ಘಟನೆಯ ಮಾಹಿತಿ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ, ಹೆಚ್ಚುವರಿ ಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಎ.ಆರ್.ಅಮಿತ್ ಹಾಗೂ ಪಟ್ಟಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಶೋಕ್‌ಕುಮಾರ್ ಗುರುವಾರ ಬೆಳಗ್ಗೆ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಯುವರಾಜ್ ಹಾಗೂ ಸಿದ್ದೇಶ್ ಮೃತದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಹಾಗೂ ತಿಪ್ಪೆಸ್ವಾಮಿ ಮೃತ ದೇಹವನ್ನು ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಆಸ್ಪತ್ರೆ ಆವರಣದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

ಈ ಘಟನೆ ಸಂಬಂಧ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.