ಸಾರಾಂಶ
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಇಡಿ ವಿಚಾರಣೆ ನಡೆಸಿದ್ದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಸಂಬಂಧ 2022ರಲ್ಲಿ ಶಾಸಕರಾಗಿದ್ದ (ಹಾಲಿ ಸ್ಪೀಕರ್) ಯು.ಟಿ.ಖಾದರ್ ವಿರುದ್ಧ ಶಿವಾಜಿನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದ್ದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಸಂಬಂಧ 2022ರಲ್ಲಿ ಶಾಸಕರಾಗಿದ್ದ (ಹಾಲಿ ಸ್ಪೀಕರ್) ಯು.ಟಿ. ಖಾದರ್ ವಿರುದ್ಧ ಶಿವಾಜಿನಗರ ಠಾಣಾ ಪೊಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆ ಸಬ್ ಇನ್ಸ್‌ಪೆಕ್ಟರ್ ದಾಖಲಿಸಿದ್ದ ಖಾಸಗಿ ದೂರು ಮತ್ತು ಆ ಕುರಿತ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಯು.ಟಿ. ಖಾದರ್ ಅವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ಇದೇ ಪ್ರಕರಣ ಸಂಬಂಧ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರ ವಿರುದ್ಧ ಶಿವಾಜಿನಗರ ಠಾಣಾ ಪೊಲೀಸರು ದಾಖಲಿಸಿದ್ದ ದೂರು ರದ್ದುಪಡಿಸಿ ಹೈಕೋರ್ಟ್, 2023ರ ಜು.7ರಂದು ಆದೇಶಿಸಿತ್ತು. ಅದೇ ಆದೇಶವನ್ನು ಆಧರಿಸಿ ಯು.ಟಿ. ಖಾದರ್ ವಿರುದ್ಧದ ಪ್ರಕರಣವನ್ನೂ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ. ಕೆಪಿಸಿಸಿ ವತಿಯಿಂದ 2022ರ ಜೂ.16ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ , ಯು.ಟಿ. ಖಾದರ್ ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರು ಪ್ರತಿಭಟನೆ ನಡೆಸಿದ್ದರು. ಇದರಿಂದ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅವರು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಖಾಸಗಿ ದೂರು ದಾಖಲಿಸಿದ್ದರು.‘ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ಪ್ರತಿಭಟನೆ ನಡೆಸುವುದನ್ನು ಕಡ್ಡಾಯಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಮಾಡಿದ್ದಾರೆ.
ಈ ಆದೇಶ ಉಲ್ಲಂಘಿಸಿ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಪ್ರತಿಭಟನೆ ನಡೆಸಿದ್ದಾರೆ. ಆ ಮೂಲಕ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾರೆ. ಮತ್ತೊಂದೆಡೆ ಪ್ರತಿಭಟನೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಸಹ ಪಡೆದಿಲ್ಲ ಎಂದು 2022ರ ಜೂ.16ರಂದು ದೂರು ದಾಖಲಿಸಿದ್ದರು. ಈ ದೂರು ರದ್ದುಪಡಿಸಲು ಕೋರಿ ಖಾದರ್ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.