ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ: ಕೇಸ್‌ ದಾಖಲು

| Published : Jun 28 2024, 12:46 AM IST / Updated: Jun 28 2024, 04:40 AM IST

ಸಾರಾಂಶ

ಮನೆಯೊಂದರಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಮೃತದೇಹ ಪತ್ತೆಯಾಗಿದೆ

 ಬೆಂಗಳೂರು : ಮನೆಯೊಂದರಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಮೃತದೇಹ ಪತ್ತೆಯಾಗಿದೆ.ದಾಸಪ್ಪ ಗಾರ್ಡನ್‌ ನಿವಾಸಿ ರಂಜಿತಾ(25) ಮೃತ ದುರ್ದೈವಿ.

ಗುರುವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು ಮೂಲದ ರಂಜಿತಾ ಮತ್ತು ಮಹಾತ್ಮ ಕಳೆದ ಎಂಟು ವರ್ಷದ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆರ್‌.ಟಿ.ನಗರದ ದಾಸಪ್ಪ ಗಾರ್ಡನ್‌ನ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಪತಿ ಮಹಾತ್ಮ ಹಣ್ಣು ವ್ಯಾಪಾರ ಮಾಡಿಕೊಂಡಿದ್ದರೆ, ರಂಜಿತಾ ಗೃಹಿಣಿಯಾಗಿದ್ದರು. ಗುರುವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಯ ರೂಮ್‌ನಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ ಮೃತದೇಹ ಕಂಡು ಬಂದಿದೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು, ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ರಂಜಿತಾ ಅವರದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಖಚಿತವಾಗಿಲ್ಲ. ಪತಿ ಮಹಾತ್ಮ ಮದ್ಯ ವ್ಯಸನಿಯಾಗಿದ್ದು, ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ರಂಜಿತಾ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಹೀಗಾಗಿ ಆರ್‌.ಟಿ.ನಗರ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.