ಸಾರಾಂಶ
ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ನಡೆದ ಕೇಂದ್ರ ಸಂಸದೀಯ ರಾಜಭಾಷಾ ಸಮಿತಿಯ ಕಾರ್ಯಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಏಕಾಏಕಿ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಲೋಪ ಆರೋಪದ ಬಗ್ಗೆ ಪೊಲೀಸ್ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ನಡೆದ ಕೇಂದ್ರ ಸಂಸದೀಯ ರಾಜಭಾಷಾ ಸಮಿತಿಯ ಕಾರ್ಯಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಏಕಾಏಕಿ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಲೋಪ ಆರೋಪದ ಬಗ್ಗೆ ಪೊಲೀಸ್ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ.ಪೊಲೀಸರ ಭದ್ರತಾ ಲೋಪದ ಆರೋಪದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಈ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಜಂಟಿ ಪೊಲೀಸ್ ಆಯುಕ್ತರಿಗೆ ಆದೇಶಿಸಿದ್ದಾರೆ.
ಕೇಂದ್ರ ಸಂಸದೀಯ ರಾಜಭಾಷಾ ಸಮಿತಿ ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಮೂರು ದಿನಗಳ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇದು ಹಿಂದೆ ಹೇರಿಕೆ ಕಾರ್ಯಕ್ರಮ ಎಂದು ಆರೋಪಿಸಿದ್ದ ಕರವೇ ಕಾರ್ಯಕರ್ತರು ಸೆ.25ರಂದು ಏಕಾಏಕಿ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ನುಗ್ಗಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಹೈಗ್ರೌಂಡ್ಸ್ ಠಾಣೆ ಪೊಲೀಸರು 41 ಮಂದಿ ಕರವೇ ಕಾರ್ಯಕರ್ತರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು.ಕೇಂದ್ರ ಸಂಸದೀಯ ರಾಜಭಾಷಾ ಸಮಿತಿಯಲ್ಲಿ ಹಲವು ಸಂಸದರು ಇದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮಕ್ಕೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಇದರ ನಡುವೆ ಕರವೇ ಕಾರ್ಯಕರ್ತರು ಹೋಟೆಲ್‌ಗೆ ನುಗ್ಗಿ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಘಟನೆಯಲ್ಲಿ ಪೊಲೀಸರ ಭದ್ರತಾ ವೈಫಲ್ಯದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.