ಕೇರಳ ಮೂಲದ ಡ್ರಗ್ಸ್‌ ಪೆಡ್ಲರ್‌ ಸೆರೆ: ₹4.34 ಲಕ್ಷ ಮೌಲ್ಯದ ಗಾಂಜಾ ಜಪ್ತಿ

| Published : May 18 2024, 01:31 AM IST / Updated: May 18 2024, 04:40 AM IST

ಕೇರಳ ಮೂಲದ ಡ್ರಗ್ಸ್‌ ಪೆಡ್ಲರ್‌ ಸೆರೆ: ₹4.34 ಲಕ್ಷ ಮೌಲ್ಯದ ಗಾಂಜಾ ಜಪ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಮಾದಕವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ನೆರೆ ರಾಜ್ಯದ ಡ್ರಗ್ಸ್‌ ಪೆಡ್ಲರ್‌ನನ್ನು ದೇವರಜೀವನಹಳ್ಳಿ(ಡಿ.ಜೆ.ಹಳ್ಳಿ) ಠಾಣೆ ಪೊಲೀಸರು ಬಂಧಿಸಿದ್ದಾರೆ.

 ಬೆಂಗಳೂರು :  ಮಾದಕವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ನೆರೆ ರಾಜ್ಯದ ಡ್ರಗ್ಸ್‌ ಪೆಡ್ಲರ್‌ನನ್ನು ದೇವರಜೀವನಹಳ್ಳಿ(ಡಿ.ಜೆ.ಹಳ್ಳಿ) ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ಜೆಫ್ರಿ ಲಾರೆನ್ಸ್‌ ಜಾನ್ಸನ್‌(25) ಬಂಧಿತ ಡ್ರಗ್ಸ್‌ ಪೆಡ್ಲರ್‌. ಆರೋಪಿಯಿಂದ ₹4.34 ಲಕ್ಷ ಮೌಲ್ಯದ 10 ಕೆ.ಜಿ. 850 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಅಪರಿಚಿತ ವ್ಯಕ್ತಿಯೊಬ್ಬ ಬಂಗಾರಗಿರಿ ಬೆಟ್ಟದ ಮರ ಬಳಿ ಮಾದಕವಸ್ತು ಮಾರಾಟ ಮಾಡಲುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಮಾಲು ಸಹಿತ ಬಂಧಿಸಲಾಗಿದೆ.

ಕೇರಳ ಮೂಲದ ಆರೋಪಿಯು ಸುಲಭವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಡ್ರಗ್ಸ್‌ ದಂಧೆಗೆ ಇಳಿದಿದ್ದ. ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ಬಳಿಕ ಪರಿಚಿತರ, ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಗಳಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಸಂಬಂಧ ಡಿ.ಜೆ.ಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲ್ವೆ ನಿಲ್ದಾಣ ಬಳಿ ಡ್ರಗ್ಸ್‌ ಮಾರಾಟ: ಆರೋಪಿ ಸೆರೆ

 ಬೆಂಗಳೂರು : ಬಾಣಸವಾಡಿ ರೈಲ್ವೆ ನಿಲ್ದಾಣದ ಬಳಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪುಲಕೇಶಿನಗರದ ಮೊಹಮದ್‌ ಶಫೀ(28) ಬಂಧಿತ ಪೆಡ್ಲರ್‌. ಆರೋಪಿಯಿಂದ ₹1.32 ಲಕ್ಷ ಮೌಲ್ಯದ 66 ಗ್ರಾಂ ತೂಕದ ಎಂಡಿಎಂಎ ಮಾದಕವಸ್ತು, ಇನೋವಾ ಕಾರು ಹಾಗೂ ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ.

ಇತ್ತೀಚೆಗೆ ಬಾಣಸವಾಡಿ ರೈಲು ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮಾಲು ಸಹಿತ ಆರೋಪಿಯನ್ನು ಬಂಧಿಸಲಾಗಿದೆ. ಈ ಸಂಬಂಧ ಪುಲಕೇಶಿನಗರ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.