ಸಾರಾಂಶ
ಬೆಂಗಳೂರು ; ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ತಲೆ ಮೇಲೆ ಕತ್ತು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜಯನಗರದ 7ನೇ ಹಂತದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ಗುರುತು ಸದ್ಯಕ್ಕೆ ಪತ್ತೆಯಾಗಿಲ್ಲ. ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದು, ಗುರುತು ಪತ್ತೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊಲೆಯಾದ ವ್ಯಕ್ತಿ ಹಲವು ದಿನಗಳಿಂದ ಜಯನಗರ 7ನೇ ಹಂತದಲ್ಲಿ ಓಡಾಡಿಕೊಂಡಿದ್ದ. ರಾತ್ರಿ ವೇಳೆ ಕಟ್ಟಡಗಳು, ಅಂಗಡಿ ಮುಂಗಟ್ಟುಗಳ ಎದುರು ಮಲಗುತ್ತಿದ್ದ ಎಂದು ತಿಳಿದು ಬಂದಿದೆ. ಈ ಅಪರಿಚಿತ ವ್ಯಕ್ತಿ ಸೋಮವಾರ ರಾತ್ರಿ ವ್ಯಕ್ತಿಯೊಬ್ಬರ ಜತೆಗೆ ಜಗಳ ಮಾಡಿಕೊಂಡಿದ್ದರ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಜಗಳದ ಬಳಿಕ ಆ ರಸ್ತೆ ಬದಿ ಮಲಗಿದ್ದ. ಮಳೆ ಶುರುವಾದ ಹಿನ್ನೆಲೆಯಲ್ಲಿ ಅಂಗಡಿಯೊಂದರ ಎದುರು ಮಲಗಿದ್ದ. ಈ ವೇಳೆ ದುಷ್ಕರ್ಮಿಗಳು ಆತನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಬೆಳಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.