ಸಾರಾಂಶ
ಬೆಂಗಳೂರು : ಇತ್ತೀಚೆಗೆ ಲಾಂಗ್ ಹಿಡಿದು ರೀಲ್ಸ್ ವಿಡಿಯೋ ಮಾಡಿದ್ದ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದ ಬಿಗ್ಬಾಸ್ ರಿಯಾಲಿಟಿ ಶೋನ ಮಾಜಿ ಸ್ಪರ್ಧಿ ರಜತ್ ಕಿಶನ್ ಮತ್ತೆ ಜೈಲು ಪಾಲು ಪಾಲಾಗಿದ್ದಾರೆ.
ಪ್ರಕರಣದ ಆರೋಪಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಎರಡು ಬಾರಿ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿ ಜಾಮೀನು ಷರತ್ತು ಉಲ್ಲಂಘಿಸಿದ್ದರು. ಈ ಸಂಬಂಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದ್ದ ಹಿನ್ನೆಲೆಯಲ್ಲಿ ಬಸವೇಶ್ವರನಗರ ಠಾಣೆ ಪೊಲೀಸರು ಆರೋಪಿ ರಜತ್ ಕಿಶನ್ನನ್ನು ಬುಧವಾರ ಬಂಧಿಸಿ 24ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿ ರಜತ್ನ ಜಾಮೀನು ರದ್ದುಗೊಳಿಸಿ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.
ವಿನಯ್ ಗೌಡಗೆ ₹500 ದಂಡ:
ಮತ್ತೊಂದೆಡೆ ಎರಡನೇ ಆರೋಪಿ ವಿನಯ್ ಗೌಡ ಇತ್ತ ರಜತ್ ಬಂಧನ ಸುದ್ದಿ ತಿಳಿದು ತಮ್ಮ ವಕೀಲರ ಜತೆಗೆ ನೇರವಾಗಿ ನ್ಯಾಯಾಲಯಕ್ಕೆ ತೆರಳಿದ್ದರು. ವಿಚಾರಣೆಗೆ ಗೈರು ಹಾಜರಿಗೆ ಕಾರಣ ನೀಡಿ ಅರ್ಜಿ ಸಲ್ಲಿಸಿದರು. ಈ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ವಿನಯ್ ಗೌಡಗೆ ₹500 ದಂಡ ವಿಧಿಸಿ, ಇನ್ನು ಮುಂದೆ ವಿಚಾರಣೆಗೆ ಗೈರು ಹಾಜರಾಗದಂತೆ ಎಚ್ಚರಿಕೆ ನೀಡಿದೆ.
ಪ್ರಕರಣದ ಹಿನ್ನೆಲೆ:
ಇತ್ತೀಚೆಗೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಲಾಂಗ್ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಈ ಸಂಬಂಧ ಬಸವೇಶ್ವರನಗರ ಠಾಣೆ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ಇಬ್ಬರನ್ನೂ ಬಂಧಿಸಿ ಜೈಲಿಗಟ್ಟಿದ್ದರು. ಬಳಿಕ ಇಬ್ಬರಿಗೂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು. 15 ದಿನಗಳಿಗೊಮ್ಮೆ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕಬೇಕು ಇತ್ಯಾದಿ ಷರತ್ತುಗಳನ್ನು ವಿಧಿಸಿತ್ತು. ಆದರೆ, ಆರೋಪಿಗಳಿಬ್ಬರೂ ಎರಡು ಬಾರಿ ವಿಚಾರಣೆಗೆ ಗೈರು ಹಾಜರಾಗಿದ್ದರು. ಹೀಗಾಗಿ ಬಂಧನಕ್ಕೆ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು.