ಇತ್ತೀಚೆಗೆ ವಾಹನಗಳ ತಪಾಸಣೆ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದ ಆರೋಪಿಯನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

 ಬೆಂಗಳೂರು : ಇತ್ತೀಚೆಗೆ ವಾಹನಗಳ ತಪಾಸಣೆ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದ ಆರೋಪಿಯನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆ.ಪಿ.ಅಗ್ರಹಾರದ ಭುವನೇಶ್ವರಿನಗರ ನಿವಾಸಿ ಮಹದೇವಸ್ವಾಮಿ ಅಲಿಯಾಸ್‌ ರಾಮಾಚಾರಿ (33) ಬಂಧಿತ. ಆರೋಪಿಯು ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ. ಮಾ.3ರಂದು ತಡರಾತ್ರಿ ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರಿಗೆ ಗುದ್ದಿಸಿ ಪರಾರಿ:

ಮಾಗಡಿ ರಸ್ತೆ ಠಾಣೆ ಪೊಲೀಸರು ವೆಸ್ಟ್‌ ಆಫ್ ಕಾರ್ಡ್‌ ರಸ್ತೆಯಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಗುಜರಿ ವ್ಯಾಪಾರಿಯಾಗಿರುವ ಮಹದೇವಸ್ವಾಮಿ ಕಾರಿನಲ್ಲಿ ಬಂದಿದ್ದಾನೆ. ಈ ವೇಳೆ ಪೊಲೀಸರು ಕಾರನ್ನು ತಡೆಯಲು ಮುಂದಾದಾಗ ಏಕಾಏಕಿ ಪೊಲೀಸ್‌ ಸಿಬ್ಬಂದಿಗೆ ಕಾರನ್ನು ಗುದ್ದಿಸಿಕೊಂಡು ಪರಾರಿಯಾಗಿದ್ದ. ಘಟನೆಯಲ್ಲಿ ಇಬ್ಬರು ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದರು.