ಬಾರ್‌ನಲ್ಲಿ ಮದ್ಯ ಸೇವಿಸುತ್ತಿದ್ದ ಸ್ನೇಹಿತರಿಬ್ಬರ ಮೇಲೆ ಬಾಟಲಿಯಿಂದ ಹೊಡೆದು ಪರಾರಿ

| N/A | Published : Mar 23 2025, 01:35 AM IST / Updated: Mar 23 2025, 04:45 AM IST

ಸಾರಾಂಶ

ಬಾರ್‌ನಲ್ಲಿ ಮದ್ಯ ಸೇವಿಸುತ್ತಿದ್ದ ಸ್ನೇಹಿತರಿಬ್ಬರ ಮೇಲೆ ದುಷ್ಕರ್ಮಿಗಳು ಏಕಾಏಕಿ ಬಿಯರ್‌ ಬಾಟಲಿಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

  ಬೆಂಗಳೂರು :  ಬಾರ್‌ನಲ್ಲಿ ಮದ್ಯ ಸೇವಿಸುತ್ತಿದ್ದ ಸ್ನೇಹಿತರಿಬ್ಬರ ಮೇಲೆ ದುಷ್ಕರ್ಮಿಗಳು ಏಕಾಏಕಿ ಬಿಯರ್‌ ಬಾಟಲಿಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಂಜುನಾಥನಗರ ನಿವಾಸಿಗಳಾದ ವಂಶಿ ಕೃಷ್ಣ ಹಾಗೂ ಪವನ್ ಗಾಯಗೊಂಡವರು. ಸದ್ಯ ಇಬ್ಬರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 11.15ಕ್ಕೆ ಸರಸ್ವತಿಪುರ ಮುಖ್ಯ ರಸ್ತೆಯ ಸ್ಫೂರ್ತಿ ಬಾರ್‌ನಲ್ಲಿ ಈ ಘಟನೆ ನಡೆದಿದೆ.

ವಂಶಿ ಕೃಷ್ಣ ಮತ್ತು ಪವನ್‌ ಶುಕ್ರವಾರ ರಾತ್ರಿ ಬಾರ್‌ಗೆ ಬಂದು ಮದ್ಯ ಸೇವಿಸುತ್ತಿದ್ದರು. ಈ ವೇಳೆ ಬಾರ್‌ಗೆ ಬಂದಿರುವ ಮೂವರು ದುಷ್ಕರ್ಮಿಗಳು ಬಿಯರ್ ಬಾಟಲಿಗಳಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಹಲ್ಲೆ ತಡೆಯಲು ಮುಂದಾದ ಬಾರ್‌ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಬಳಿಕ ಗಾಯಾಳುಗಳಾದ ಪವನ್‌ ಮತ್ತು ವಂಶಿ ಕೃಷ್ಣನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈಯಕ್ತಿಕ ದ್ವೇಷದಿಂದ ಹಲ್ಲೆ ಶಂಕೆ:

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.