ಸಾರಾಂಶ
ಬೆಂಗಳೂರು : ಇತ್ತೀಚೆಗೆ ನಗರದ ರಾಗಿಗುಡ್ಡ-ಸೆಂಟ್ರಲ್ ಸಿಲ್ಕ್ ಬೋರ್ಡ್ ಡಬಲ್ ಡೆಕ್ಕರ್ ಮೇಲ್ಸೇತುವೆಯಲ್ಲಿ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡಿ ಕಾರು ಸವಾರರಿಗೆ ಚಾಕು ತೋರಿಸಿ ಪುಂಡಾಟ ಮೆರೆದಿದ್ದ ಘಟನೆ ಸಂಬಂಧ ಸುದ್ದಗುಂಟೆ ಠಾಣೆ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಬಂಧಿಸಿದ್ದಾರೆ.
ಸುಭಾಷ್‌ನಗರದ ಸಂಜಯ್ ಮತ್ತು ಇಬ್ಬರು ಅಪ್ರಾಪ್ತರು ಬಂಧಿತರು. ಆರೋಪಿಗಳು ಇತ್ತೀಚೆಗೆ ಡಬಲ್ ಡೆಕ್ಕರ್ ಮೇಲ್ಸೇತುವೆಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡುತ್ತಾ ಇತರೆ ವಾಹನ ಸವಾರರಿಗೆ ತೊಂದರೆ ಉಂಟು ಮಾಡಿದ್ದರು. ಅಷ್ಟೇ ಅಲ್ಲದೆ, ಚಲಿಸುವ ಕಾರಿಗೆ ಕಾಲಿನಿಂದ ಒದ್ದು ಸವಾರರಿಗೆ ಚಾಕು ತೋರಿಸಿ ಪುಂಡಾಟ ಮೆರೆದಿದ್ದರು. ಈ ಘಟನೆಯನ್ನು ಕಾರೊಂದರ ಪ್ರಯಾಣಿಕರು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು, ವೈರಲ್ ವಿಡಿಯೋದಲ್ಲಿನ ಸುಳಿವು ಆಧರಿಸಿ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಕಾರು ಪ್ರಯಾಣಿಕರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ ಆರೋಪದಡಿ ಸುದ್ದಗುಂಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದರೆ, ವ್ಹೀಲಿಂಗ್ ಹುಚ್ಚಾಟದ ವಿರುದ್ಧ ಮೈಕೋ ಲೇಔಟ್ ಸಂಚಾರ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.