ದ್ವಿಚಕ್ರ ವಾಹನಕ್ಕೆ ಕ್ಯಾಂಟರ್‌ ವಾಹನ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ತಾಯಿ-ಮಗ ದಾರುಣವಾಗಿ ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

 ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಕ್ಯಾಂಟರ್‌ ವಾಹನ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ತಾಯಿ-ಮಗ ದಾರುಣವಾಗಿ ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದೊಡ್ಡಗೊಲ್ಲರಹಟ್ಟಿ ನಿವಾಸಿಗಳಾದ ಅಶ್ವಿನಿ (41) ಮತ್ತು ಇವರ ಮಗ ಅಭಿಲಾಷ್‌ (19) ಮೃತ ದುರ್ದೈವಿಗಳು. ಭಾನುವಾರ ಬೆಳಗ್ಗೆ ಸುಮಾರು 7.40ಕ್ಕೆ ಮೈಸೂರು-ಬೆಂಗಳೂರು ರಸ್ತೆಯ ಜುಡಿಯೋ ಶೋ ರೂಮ್‌ ಸಮೀಪ ಈ ದುರ್ಘಟನೆ ನಡೆದಿದೆ. ಘಟನೆ ಸಂಬಂಧ ಕ್ಯಾಂಟರ್‌ ವಾಹನದ ಚಾಲಕ ಶಿವ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರಾಪ್‌ ಮಾಡಲು ಹೋಗುವಾಗ ಘಟನೆ:

ಮೃತರಾದ ಅಶ್ವಿನಿ ಚಾಮರಾಜಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದರು. ಮಗ ಅಭಿಲಾಷ್‌ ಪ್ರಥಮ ವರ್ಷ ವಾಣಿಜ್ಯ ಪದವಿ ವ್ಯಾಸಂಗ ಮಾಡುತ್ತಿದ್ದ. ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ತಾಯಿಯನ್ನು ಕೆಲಸಕ್ಕೆ ಡ್ರಾಪ್‌ ಮಾಡಲು ಮನೆಯಿಂದ ಚಾಮರಾಜಪೇಟೆಗೆ ಹೊರಟಿದ್ದ. ಮೈಸೂರು-ಬೆಂಗಳೂರು ರಸ್ತೆಯ ಜುಡಿಯೋ ಶೋ ರೂಮ್‌ ಬಳಿ ಕ್ಯಾಂಟರ್‌ ಮತ್ತು ಕಾರೊಂದರ ನಡುವೆ ದ್ವಿಚಕ್ರ ವಾಹನ ಚಲಾಯಿಸಿದ್ದಾನೆ. ಈ ವೇಳೆ ಕ್ಯಾಂಟರ್‌ ವಾಹನ, ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸಹಿತ ತಾಯಿ-ಮಗ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಸ್ಥಳೀಯರ ನೆರವಿನಿಂದ ಸಂಚಾರ ಪೊಲೀಸರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಇಬ್ಬರೂ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ನಿಖರ ಕಾರಣ ತಿಳಿದು ಬಂದಿಲ್ಲ

ಈ ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಲಾಗುತ್ತಿದೆ. ಕ್ಯಾಂಟರ್‌ ವಾಹನದ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.