ಸಾರಾಂಶ
ಕನ್ನಡಪ್ರಭಾ ವಾರ್ತೆ ಬೆಂಗಳೂರು
ನಗರ್ತಪೇಟೆಯ ಮೊಬೈಲ್ ಅಂಗಡಿ ಮಾಲೀಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸುವ ಮೂಲಕ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪ ಸಂಬಂಧ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ನಗರದ ಹಲಸೂರು ಗೇಟ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ತೇಜಸ್ವಿಸೂರ್ಯ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರ ತೇಜಸ್ವಿಸೂರ್ಯ ಅವರ ವಕೀಲ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದರು.
ಈ ವಾದ ಪರಿಗಣಿಸಿದ ನ್ಯಾಯಪೀಠ, ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿ ಅರ್ಜಿ ವಿಚಾರಣೆ ಮುಂದೂಡಿದೆ.ಆಜಾನ್ ಆಗುವ ವೇಳೆ ಧಾರ್ಮಿಕ ಹಾಡು ಹಾಕಿದರು ಎಂದು ಆರೋಪಿಸಿ ಕೆಲ ಯುವಕರು ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಮೇಲೆ ಗಂಭೀರ ಹಲ್ಲೆ ನಡೆಸಿದರು.
ಅದನ್ನು ವಿರೋಧಿಸಿ ನಗರ್ತಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅರ್ಜಿದಾರರು ಭಾಗವಹಿಸಿದ್ದರು. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟು ಮಾಡಲಾಗಿದೆ ಮತ್ತು ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರಲಾಗಿದೆ ಎಂದು ಆರೋಪಿಸಿ ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಈ ಆರೋಪಗಳಿಗೆ ಯಾವುದೇ ಪುರಾವೆಗಳಿಲ್ಲ. ಆರೋಪಗಳೂ ಆಧಾರ ರಹಿತವಾಗಿದ್ದು, ಅರ್ಜಿದಾರರಿಗೆ ತೊಂದರೆ ನೀಡುವ ಉದ್ದೇಶದಿಂದ ರಾಜಕೀಯ ಪ್ರೇರಿತವಾಗಿ ಪ್ರಕರಣ ದಾಖಲಿಸಲಾಗಿದೆ. ಹಾಗಾಗಿ, ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿದ್ದರು.