ನಗರದಲ್ಲಿ ರಾತ್ರಿ ವೇಳೆ ಅಪರಾಧಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಾಕಾಬಂಧಿ : ದಯಾನಂದ

| N/A | Published : Feb 22 2025, 01:45 AM IST / Updated: Feb 22 2025, 04:19 AM IST

ಸಾರಾಂಶ

ನಗರದಲ್ಲಿ ರಾತ್ರಿ ವೇಳೆ ಅಪರಾಧಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ನಾಕಾಬಂಧಿ ಹಾಕುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

  ಬೆಂಗಳೂರು : ನಗರದಲ್ಲಿ ರಾತ್ರಿ ವೇಳೆ ಅಪರಾಧಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ನಾಕಾಬಂಧಿ ಹಾಕುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಪೊಲೀಸರ ರಾತ್ರಿ ಗಸ್ತು ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ಮಾಡಿ ಚರ್ಚಿಸಲಾಗಿದೆ. ರಾತ್ರಿ ಗಸ್ತು, ಇ-ಬೀಟ್‌ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸಿಬ್ಬಂದಿಗೆ ವಿಡಿಯೋ ಕಾನ್ಫರೆನ್ಸ್‌ ಮುಖಾಂತರ ತರಬೇತಿ ನೀಡಲಾಗುತ್ತಿದೆ ಎಂದರು.

ಇತ್ತೀಚೆಗೆ ಹಿರಿಯ ಅಧಿಕಾರಿಗಳು ರಾತ್ರಿ ಗಸ್ತು ಮಾಡಿದ್ದು, ಸಾಕಷ್ಟು ವಿಚಾರಗಳು ಗೊತ್ತಾಗಿದೆ. ಈ ರಾತ್ರಿ ಗಸ್ತುನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೆಲ ಕ್ರಮ ಕೈಗೊಳ್ಳಲಾಗುತ್ತಿದೆ. ನಗರ ವ್ಯಾಪ್ತಿಯಲ್ಲಿ ಎಲ್ಲಾ ವಿಭಾಗಗಳಲ್ಲಿ ರಾತ್ರಿ ವೇಳೆ ನಾಕಾಬಂಧಿ ಹಾಕಲು ಚರ್ಚಿಸಲಾಗಿದೆ. ಠಾಣಾವಾರು ಎಲ್ಲಾ ಹಂತದ ಅಧಿಕಾರಿಗಳು ರಾತ್ರಿ ಗಸ್ತು ಕಡ್ಡಾಯವಾಗಿ ಮಾಡಬೇಕು ಎಂದು ಸೂಚಿಸಲಾಗಿದೆ. ನಿಯಂತ್ರಣ ಕೊಠಡಿಯಿಂದ ಜಿಪಿಎಸ್‌ ಲೊಕೇಶನ್‌ ಮೇಲೆ ನಿಗಾವಹಿಸಲಾಗುತ್ತಿದೆ ಎಂದು ಹೇಳಿದರು.

ರಾತ್ರಿ ಲಾಂಗ್‌ ಹಿಡಿದು ಓಡಾಟ: ರೌಡಿಪಟ್ಟಿಗೆ

ಇತ್ತೀಚೆಗೆ ಡಿ.ಜೆ.ಹಳ್ಳಿ ಮತ್ತು ರಾಮಮೂರ್ತಿನಗರ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ದ್ವಿಚಕ್ರ ವಾಹನದಲ್ಲಿ ಪುಂಡಾಟ ಮೆರೆದಿದ್ದ 11 ಮಂದಿಯನ್ನು ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳ ವಿರುದ್ಧ ರೌಡಿ ಪಟ್ಟಿ ತೆರೆಯಲು ಸೂಚಿಸಲಾಗಿದೆ. ಅಂದು ಗಸ್ತು ಪೊಲೀಸರು ಏನು ಮಾಡುತ್ತಿದ್ದರು ಎಂಬುದರ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡಲು ಪೂರ್ವ ವಿಭಾಗದ ಜಂಟಿ ಪೊಲೀಸ್‌ ಆಯುಕ್ತರಿಗೆ ಸೂಚಿಸಲಾಗಿದೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಬಿ.ದಯಾನಂದ ತಿಳಿಸಿದರು.