ಸಾರಾಂಶ
: ರಸ್ತೆ ದಾಟುವಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮುನೇಕೊಳಲು ನಿವಾಸಿ ಬಾಬು(49) ಮೃತ ಪಾದಾಚಾರಿ. ಚನ್ನಸಂದ್ರದ ಹೋಪ್ ಫಾರ್ಮ್ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ಸುಮಾರು 10ಕ್ಕೆ ಈ ಘಟನೆ ನಡೆದಿದೆ. ಟಿಪ್ಪರ್ ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಬಾಬು ಅಂಗವಿಕಲನಾಗಿದ್ದು, ಸೆಕ್ಯೂರಿ ಗಾರ್ಡ್ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಹೋಪ್ ಫಾರ್ಮ್ ಜಂಕ್ಷನ್‌ನಲ್ಲಿ ರಸ್ತೆ ದಾಟುವಾಗ ವೇಗವಾಗಿ ಬಂದ ಟಿಪ್ಪರ್ ಲಾರಿ ಏಕಾಏಕಿ ಬಾಬುಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಬಾಬು ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಬಾಬು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಘಟನೆ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು, ಪರಿಶೀಲನೆ ನಡೆಸಿ ಟಿಪ್ಪರ್ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.