ಸಾರಾಂಶ
ಬೆಂಗಳೂರು : ಹಿಂದಿನಿಂದ ಮಿನಿ ಬಸ್ ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಜಾಲ ನಿವಾಸಿ ಸದಾನಂದ ಹಿರೇಮಠ(53) ಮೃತರು. ಭಾನುವಾರ ರಾತ್ರಿ ಸುಮಾರು 8.30ಕ್ಕೆ ಚಿಕ್ಕಜಾಲ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಠಾಣೆಯ ಸಮೀಪದ ಸರ್ವಿಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಸಾದಹಳ್ಳಿ ಗೇಟ್‌ನ ಪೆಟ್ರೋಲ್ ಬಂಕ್‌ನಲ್ಲಿ ಸದಾನಂದ ಹಿರೇಮಠ ಕೆಲಸ ಮಾಡುತ್ತಿದ್ದರು. ರಾತ್ರಿ ಕೆಲಸ ಮುಗಿಸಿಕೊಂಡು ತರಕಾರಿ ಖರೀದಿಸಿ ಸರ್ವಿಸ್ ರಸ್ತೆಯಲ್ಲಿ ಮನೆ ಕಡೆಗೆ ನಡೆದುಕೊಂಡು ಹೋಗುವಾಗ ಹಿಂದಿನಿಂದ ವೇಗವಾಗಿ ಬಂದ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಸದಾನಂದ ಹಿರೇಮಠ ಮೇಲೆಯೇ ಮಿನಿ ಬಸ್‌ನ ಚಕ್ರಗಳು ಉರುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ಮಿನಿ ಬಸ್ ಜಪ್ತಿ ಮಾಡಿದ್ದು, ಅದರ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂಬಂಧ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.