400 ಮಹಿಳೆಯರ ಮೇಲೆ ಪ್ರಜ್ವಲ್‌ ರೇಪ್‌ ಮಾಡಿದ್ದಾರೆಂದ ರಾಹುಲ್‌ ಗಾಂಧಿ ವಿರುದ್ಧ ಅರ್ಜಿ

| Published : Jul 31 2024, 01:11 AM IST

ಸಾರಾಂಶ

ಪ್ರಜ್ವಲ್ ರೇವಣ್ಣ ಅವರನ್ನು ಟೀಕಿಸುವ ಭರದಲ್ಲಿ ಮಹಿಳೆಯರಿಗೆ ಮಾನಹಾನಿಯಾಗುವಂತೆ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರು: ಲೈಂಗಿಕ ಹಗರಣ ಸಂಬಂಧ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಟೀಕಿಸುವ ಭರದಲ್ಲಿ ಮಹಿಳೆಯರಿಗೆ ಮಾನಹಾನಿಯಾಗುವಂತೆ ಹೇಳಿಕೆ ನೀಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಈ ಕುರಿತಂತೆ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಚಿ.ನಾ. ರಾಮು ಮತ್ತು ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 2024ರ ಮೇ 2ರಂದು ಶಿವಮೊಗ್ಗದಲ್ಲಿ ಪ್ರಚಾರ ಭಾಷಣ ಮಾಡಿದ್ದ ರಾಹುಲ್ ಗಾಂಧಿ, ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರ ಮಾಡಿ, ಆ ಘಟನೆಯನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಇಂತಹ ಅಭ್ಯರ್ಥಿ ಪರವಾಗಿ ಮತ ಕೇಳಿರುವ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದರು.