ಸಾರಾಂಶ
ಕಳೆದ ಮೇ ತಿಂಗಳಲ್ಲಿ ನಗರದ ಸುಬ್ರಮಣ್ಯಪುರದ ಬೃಂದಾವನ ಲೇಔಟ್‌ನಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಭುದ್ಯಾ(20) ಕೊಲೆ ಪ್ರಕರಣ ಸಂಬಂಧ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಮಂಗಳವಾರ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಕೆಲ ಮಾಹಿತಿ ಸಂಗ್ರಹಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕಳೆದ ಮೇ ತಿಂಗಳಲ್ಲಿ ನಗರದ ಸುಬ್ರಮಣ್ಯಪುರದ ಬೃಂದಾವನ ಲೇಔಟ್‌ನಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಭುದ್ಯಾ(20) ಕೊಲೆ ಪ್ರಕರಣ ಸಂಬಂಧ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಮಂಗಳವಾರ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಕೆಲ ಮಾಹಿತಿ ಸಂಗ್ರಹಿಸಿದ್ದಾರೆ.ಸಿಐಡಿ ಎಸ್ಪಿ ವೆಂಕಟೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಬೃಂದಾವನ ಲೇಔಟ್‌ನ ಪ್ರಭುದ್ಯಾ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಪ್ರಭುದ್ಯಾ ತಾಯಿ ಸಾಮಾಜಿಕ ಕಾರ್ಯಕರ್ತೆ ಕೆ.ಆರ್.ಸೌಮ್ಯಾ ಸೇರಿ ಕೆಲವರಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಮೃತಳ ತಾಯಿ ಸಾಮಾಜಿಕ ಕಾರ್ಯಕರ್ತೆ ಕೆ.ಆರ್.ಸೌಮ್ಯ ಅವರು ಈ ಪ್ರಕರಣದಲ್ಲಿ ಸುಬ್ರಹ್ಮಣ್ಯಪುರ ಪೊಲೀಸರ ತನಿಖೆ ಬಗ್ಗೆ ಆತಂಕ ಮತ್ತು ಅನುಮಾನ ವ್ಯಕ್ತಪಡಿಸಿದ್ದರು. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ರಿಯ ಕೊಲೆ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದರು. ಅದರಂತೆ ಸಿಐಡಿ ಅಧಿಕಾರಿಗಳು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರಿಂದ ಪ್ರಕರಣದ ವರ್ಗಾವಣೆ ಪಡೆದು ಇದೀಗ ತನಿಖೆ ಆರಂಭಿಸಿದ್ದಾರೆ.ಪ್ರಕರಣದ ಹಿನ್ನೆಲೆ:
ತಾಯಿ ಮತ್ತು ಸಹೋದರನ ಜತೆಗೆ ಬೃಂದಾವನ ಲೇಔಟ್‌ನಲ್ಲಿ ನೆಲೆಸಿದ್ದ ಪ್ರಭುದ್ಯಾ, ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಮೇ 15ರಂದು ಸಂಜೆ ಮನೆಯ ಬಾತ್ ರೂಮ್‌ನಲ್ಲಿ ಪ್ರಭುದ್ಯಾಳ ಬಲ ಕುತ್ತಿಗೆ ಮತ್ತು ಎಡಗೈ ಕೊಯ್ದು ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಅಪ್ರಾಪ್ತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕೊಲೆ ರಹಸ್ಯ ಬಯಲಾಗಿತ್ತು. ಎರಡು ಸಾವಿರ ರು. ಸಾಲದ ಹಣದ ವಿಚಾರಕ್ಕೆ ಪರಿಚಿತ ಅಪ್ರಾಪ್ತ, ಪ್ರಭುದ್ಯಾ ಜತೆಗೆ ಜಗಳ ತೆಗೆದು ಚಾಕುವಿನಿಂದ ಕತ್ತು ಮತ್ತು ಕೈ ಕೊಯ್ದು ಕೊಲೆ ಮಾಡಿದ್ದ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.