ಬೆಂಗಳೂರು ಸಿವಿಲ್ ನ್ಯಾಯಾಲಯಗಳಲ್ಲಿ ಬಾಕಿ ಪ್ರಕರಣ ಇತ್ಯರ್ಥಗೊಳಿಸಲು ಡಿ.14ಕ್ಕೆ ರಾಷ್ಟ್ರೀಯ ಲೋಕ ಅದಾಲತ್

| Published : Nov 30 2024, 01:31 AM IST / Updated: Nov 30 2024, 04:45 AM IST

Rajasthan High Court

ಸಾರಾಂಶ

ಬೆಂಗಳೂರು ನಗರ ಜಿಲ್ಲೆಯ ಸಿವಿಲ್ ನ್ಯಾಯಾಲಯಗಳಲ್ಲಿ ಬಾಕಿಯಿರುವ ಸಿವಿಲ್ ಮತ್ತು ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಜಿಲ್ಲಾ ಕಾನೂನು ಸೇವೆಗಳ ಕಾನೂನು ಪ್ರಾಧಿಕಾರದ ವತಿಯಿಂದ ಇದೇ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ

 ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಸಿವಿಲ್ ನ್ಯಾಯಾಲಯಗಳಲ್ಲಿ ಬಾಕಿಯಿರುವ ಸಿವಿಲ್ ಮತ್ತು ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಜಿಲ್ಲಾ ಕಾನೂನು ಸೇವೆಗಳ ಕಾನೂನು ಪ್ರಾಧಿಕಾರದ ವತಿಯಿಂದ ಇದೇ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರೂ ಆದ ಪ್ರಾಧಿಕಾರದ ಅಧ್ಯಕ್ಷ ಬಿ. ಮುರಳಿಧರ ಪೈ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಕಳೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನಗರ ಸಿವಿಲ್ ನ್ಯಾಯಾಲಯದಲ್ಲಿ ಬಾಕಿಯಿದ್ದ 26,353 ಪ್ರಕರಣಗಳು ಹಾಗೂ 3,66,241 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 3,92,594 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿತ್ತು. ಪ್ರಸ್ತುತ ಬೆಂಗಳೂರು ನಗರ ಜಿಲ್ಲೆಯಲ್ಲಿ 3,89,520 ಪ್ರಕರಣಗಳು ಬಾಕಿಯಿದೆ. ಈ ಬಾರಿಯ ಲೋಕ ಅದಾಲತ್‌ನಲ್ಲಿ 35000ಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

ಅಲ್ಲದೆ, ರಾಜಿಯಾಗಬಲ್ಲ ಕ್ರಿಮಿನಲ್‌, ಬ್ಯಾಂಕ್ ವಸೂಲಾತಿ, ಚೆಕ್‌ ಅಮಾನ್ಯ, ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವೈವಾಹಿಕ, ಕೌಟುಂಬಿಕ ವ್ಯಾಜ್ಯಗಳು, ವಿದ್ಯುತ್ ನಿಯಂತ್ರಣ ಆಯೋಗ, ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಿಸಿ, ಸಾಲ ವಸೂಲಾತಿ ನ್ಯಾಯಾಧೀಕರಣ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಮತ್ತು ರಾಜಿಯಾಗಬಲ್ಲ ಸಿವಿಲ್ ಪ್ರಕರಣ, ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಅದಾಲತ್‌ನಲ್ಲಿ ಬಗೆಹರಿಸಿಕೊಳ್ಳಬಹುದು ಎಂದು ವಿವರಿಸಿದರು.

ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಲೋಕ ಅದಾಲತ್ ಇತ್ಯರ್ಥಪಡಿಸಿಕೊಳ್ಳಲು ಬಯಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. ಉಚಿತ ಸೇವೆಗಳನ್ನು ಪಡೆಯಲು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ಸಹಾಯವಾಣಿ ಸಂಖ್ಯೆ (15100) ಅಭಿವೃದ್ಧಿ ಪಡಿಸಿದೆ. ಈ ಸಂಖ್ಯೆಗೆ ಕರೆ ಮಾಡಿ ದೇಶದ ಯಾವುದೇ ಭಾಗದ ಸಾರ್ವಜನಿಕರು ಯಾವುದೇ ಭಾಷೆಯಲ್ಲಿ ಮಾಹಿತಿ ಪಡೆಯಬಹುದಾಗಿದೆ.

ಉಚಿತ ಕಾನೂನು ಸೇವೆ:  ಕಾನೂನು ಸೇವೆಗಳ ಪ್ರಾಧಿಕಾರದಿಂದ, ಜೈಲಿನಲ್ಲಿರುವ ಅಪರಾಧಿಗಳು, ವಿಚಾರಣಾಧೀನ ಖೈದಿಗಳು ಸೇರಿ ಅಗತ್ಯ ಇರುವವರಿಗೆ ಕಾನೂನು ನೆರವು ನೀಡಲು ಹೊಸದಾಗಿ ‘ಡಿಫೆನ್ಸ್ ಸಿಸ್ಟಂ’ ಎಂಬ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ತಮ್ಮ ಪ್ರಕರಣಗಳನ್ನು ನಡೆಸಲು ತೊಂದರೆ ಅನುಭವಿಸುತ್ತಿರುವವರು ಕಾನೂನು ಪ್ರಾಧಿಕಾರದಿಂದ ವಕೀಲರ ಉಚಿತ ಕಾನೂನು ಸೇವೆ ಪಡೆಯಬಹುದಾಗಿದೆ ಎಂದರು. ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವರದರಾಜು ಇದ್ದರು.