ಸಾರಾಂಶ
ಬೆಂಗಳೂರು : ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಸ್ಸಾಂ ಮೂಲದ ಅನೂಪ್ ಆರಂಧರ್(33) ಮೃತ ಸವಾರ. ಹಿಂಬದಿ ಸವಾರ ಅಭಿಷೇಕ್ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುರುವಾರ ರಾತ್ರಿ ಸುಮಾರು 10ಕ್ಕೆ ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜು ಮುಖ್ಯರಸ್ತೆಯ ರಾಯನ್ ಇಂಟರ್ ನ್ಯಾಷನಲ್ ಶಾಲೆ ಬಳಿ ಘಟನೆ ನಡೆದಿದೆ.
ಅನೂಪ್ ಆರಂಧರ್ ಸೆಕ್ಯೂರಿಟಿ ಗಾರ್ಡ್ ಆಗಿದ್ದು, ನಗರದ ಮಣಿಪಾಲ್ ಅಕಾಡೆಮಿಯಲ್ಲಿ ಕೆಲಸ ಮಾಡುತ್ತಿದ್ದ. ರಾತ್ರಿ ಸ್ನೇಹಿತ ಅಭಿಷೇಕ್‌ನನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಹೋಗುವಾಗ ಮಾರ್ಗ ಮಧ್ಯೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ಉರುಳಿ ಬಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪರೀಕ್ಷಿಸಿದ ವೈದ್ಯರು ಸವಾರ ಅನೂಪ್ ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಹಿಂಬದಿ ಸವಾರ ಅಭಿಷೇಕ್‌ಗೆ ಚಿಕಿತ್ಸೆ ಮುಂದುವರೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸವಾರನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.