ಸಾರಾಂಶ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿ ಮಂಗಳವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿ ಮಂಗಳವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಹೀಗಾಗಿ, ನಟ ದರ್ಶನ್‌ಗೆ ಟೆನ್ಷನ್ ಶುರುವಾಗಿದೆ.
2024ರ ಜೂ.8ರಂದು ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧನವಾಗಿ 6 ತಿಂಗಳ ಬಳಿಕ, 2024ರ ಡಿ.13 ರಂದು ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಹೈಕೋರ್ಟ್ ದರ್ಶನ್, ಪವಿತ್ರಾ ಸೇರಿ 7 ಮಂದಿಗೆ, ವಿಚಾರಣಾಧೀನ ನ್ಯಾಯಾಲಯ ಇತರರಿಗೆ ಜಾಮೀನು ಮಂಜೂರು ಮಾಡಿತ್ತು. ಈ 7 ಮಂದಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಕಳೆದ ಗುರುವಾರ ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ನೇತೃತ್ವದ ವಿಭಾಗೀಯ ಪೀಠ, ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ತನ್ನ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಪ್ರಕರಣದಲ್ಲಿ ಹೈಕೋರ್ಟ್ ತನ್ನ ವಿವೇಚನೆಯನ್ನು ಸರಿಯಾಗಿ ಬಳಸಿಲ್ಲ ಎಂದು ಅಭಿಪ್ರಾಯಪಟ್ಟು, ವಿಚಾರಣೆಯನ್ನು ಜು.22, ಮಂಗಳವಾರಕ್ಕೆ ಮುಂದೂಡಿತ್ತು.