ಸಾರಾಂಶ
ಬೆಂಗಳೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿರುವ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಭಾನುವಾರ ಮುಂಜಾನೆ ಸುಮಾರು 4 ಗಂಟೆಗೆ ಯಶವಂತಪುರ ಸರ್ಕಲ್ ಸಮೀಪದ ಸಿ.ವಿ.ರಾಮನ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮಹೀಂದ್ರ ಎಕ್ಸ್ ಯುವಿ 500 ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆ ವೇಳೆ ಗಾಯಗೊಂಡ ಕಾರು ಚಾಲಕ ಸೋಮಶೇಖರ್ ಎಂಬುವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂದ ಸಂಚಾರ ಪೊಲೀಸರು ಪರಿಶೀಲಿಸಿ, ಕಾರನ್ನು ಜಪ್ತಿ ಮಾಡಿ ಠಾಣೆಗೆ ಸಾಗಿಸಿದ್ದಾರೆ. ಅಪಘಾತದ ವೇಳೆ ಕಾರಿನ ಏರ್ ಬ್ಯಾಗ್‌ಗಳು ತೆರೆದುಕೊಂಡ ಹಿನ್ನೆಲೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸದ್ಯ ಯಾವುದೇ ದೂರು ದಾಖಲಾಗಿಲ್ಲ. ಕಾರಿನ ಮಾಲೀಕರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿ ಬಳಿಕ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.