ಹ್ಯಾಂಡಲ್‌ ಲಾಕ್‌ ಮುರಿದು ಬೈಕ್‌ಗಳ ಕಳವು: ಇಬ್ಬರು ಆರೋಪಿಗಳ ಬಂಧನ

| Published : Jan 20 2024, 02:02 AM IST

ಸಾರಾಂಶ

ಹ್ಯಾಂಡಲ್‌ ಲಾಕ್‌ ಮುರಿದು ಬೈಕ್‌ಗಳ ಕಳವು: ಇಬ್ಬರು ಆರೋಪಿಗಳ ಬಂಧನ. ₹4 ಲಕ್ಷ ಮೌಲ್ಯದ 1 ಕಾರು, 7 ಬೈಕ್‌ ಜಪ್ತಿ

ಕನ್ನಡಪ್ರಭ ವಾರ್ತೆ ಬೆಂಗಳೂರು

ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಲ್ಸನ್‌ ಗಾರ್ಡನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆ.ಜಿ. ಹಳ್ಳಿಯ ಪ್ರದೀಪ್‌(27) ಮತ್ತು ಅರ್ಬಜ್‌ ಖಾನ್‌(28) ಬಂಧಿತರು. ಆರೋಪಿಗಳಿಂದ ನಾಲ್ಕು ಲಕ್ಷ ರು. ಮೌಲ್ಯದ ಒಂದು ಕಾರು ಹಾಗೂ ಏಳು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ವಿಲ್ಸನ್‌ ಗಾರ್ಡನ್‌ನಲ್ಲಿ ವ್ಯಕ್ತಿಯೊಬ್ಬರ ಮನೆ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ಹೆಚ್ಚು ವಿದ್ಯಾಭ್ಯಾಸ ಮಾಡಿಲ್ಲ. ನಿರ್ದಿಷ್ಟ ಕೆಲಸ ಇಲ್ಲದೆ ಅಲೆದಾಡಿಕೊಂಡಿದ್ದರು. ತಮ್ಮ ಮೋಜು-ಮಸ್ತಿಗೆ ಸುಲಭವಾಗಿ ಹಣ ಹೊಂದಿಸುವ ಉದ್ದೇಶದಿಂದ ದ್ವಿಚಕ್ರ ವಾಹನ ಕಳ್ಳತನಕ್ಕೆ ಇಳಿದಿದ್ದರು. ರಾತ್ರಿ ವೇಳೆ ನಗರದ ವಿವಿಧೆಡೆ ಸುತ್ತಾಡಿ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಗುರಿಯಾಗಿಸಿಕೊಂಡು ಹ್ಯಾಂಡಲ್‌ ಲಾಕ್‌ ಮುರಿದು ಕಳ್ಳತನ ಮಾಡುತ್ತಿದ್ದರು. ಬಳಿಕ ಪರಿಚಿತರ ಮೂಲಕ ಕದ್ದ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಮೋಜು-ಮಸ್ತಿ ಮಾಡಿ ವ್ಯಯಿಸುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.

ಆರೋಪಿಗಳ ಬಂಧನದಿಂದ ವಿಲ್ಸನ್‌ ಗಾರ್ಡನ್‌ ಠಾಣಾ ವ್ಯಾಪ್ತಿಯಲ್ಲಿ ಒಂದು ಕಾರು, ಎರಡು ದ್ವಿಚಕ್ರ ವಾಹನ, ಪರಪ್ಪನ ಅಗ್ರಹಾರ, ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದು ಸೇರಿದಂತೆ ನಗರದ ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಕಳುವಾಗಿದ್ದ ಒಟ್ಟು ಏಳು ದ್ವಿಚಕ್ರ ವಾಹನಗಳ ಕಳವು ಪ್ರಕರಣ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.