ಕನ್ನಡಪ್ರಭ ವಾರ್ತೆ ಪಾಂಡವಪುರ

ಸಾಲಬಾಧೆಯಿಂದ ರೈತನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗ್ರಾಮದ ಮಂಚೇಗೌಡ (೫೮) ಆತ್ಮಹತ್ಯೆಗೆ ಶರಣಾದ ರೈತ. ಮಂಚೇಗೌಡ ತಮಗಿರುವ ೩೦ ಗುಂಟೆ ಜಮೀನಿನಲ್ಲಿ ಬೇಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇವರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಹಲವು ವರ್ಷಗಳಿಂದ ಸಂಕಷ್ಟಕ್ಕೆ ಸಿಲುಕಿದ್ದರು, ಬೇಸಾಯಕ್ಕಾಗಿ ಸುಮಾರು ೮ ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಸಾಲಗಾರರ ಹಿಂಸೆ ಹೆಚ್ಚಾದ ಹಿನ್ನೆಲೆಯಲ್ಲಿ ಮನನೊಂದು ಸೋಮವಾರ ಬೆಳಗ್ಗೆ ಜಮೀನಿನ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಮೃತ ದೇಹವನ್ನು ಪಾಂಡವಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಪಟ್ಟಣದ ಶವಗಾರ ಬಳಿ ಆಗಮಿಸಿ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತರ ಪತ್ನಿ ಗೀತಾ ನೀಡಿದ ದೂರಿನ ಮೇರೆಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.