ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಹೊರ ವಲಯದ ಕೋಡಿಹಳ್ಳಿ ಸಮೀಪದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಸಾರಿಗೆ ಬಸ್ಸೊಂದು ಮೇಲ್ಸೇತುವೆ ಗೋಡೆಗೆ ಡಿಕ್ಕಿ ಹೊಡೆದು ಬಸ್ ಚಾಲಕ, ಮಹಿಳೆಯರು ಸೇರಿದಂತೆ 19 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬುಧವಾರ ಬೆಳಗ್ಗೆ ಜರುಗಿದೆ.ಬಸ್ ಚಾಲಕ ರಂಗಪ್ಪ, ಜಯಮ್ಮ, ಲತಾ, ಪೂಜಾ, ಕೀರ್ತನ, ನಾಗರಾಜು ಸೇರಿದಂತೆ 19 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಜಯಮ್ಮ ಅವರಿಗೆ ಮದ್ದೂರು ಆಸ್ಪತ್ರೆ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಉಳಿದವರು ಮದ್ದೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕೀಡಾದ ಸಾರಿಗೆ ಬಸ್ ಬೆಂಗಳೂರಿಂದ ವಿರಾಜಪೇಟೆಗೆ ತೆರಳುತ್ತಿತ್ತು. ಬೆಳಗ್ಗೆ 8 ಗಂಟೆ ಸುಮಾರಿಗೆ ಕೋಡಿಹಳ್ಳಿ ಸಮೀಪದ ಸರ್ವಿಸ್ ರಸ್ತೆಯಲ್ಲಿ ಬಸ್ಸಿನ ಸ್ಟೇರಿಂಗ್ ಲಾಕ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮೇಲ್ ಸೇತುವೆ ಗೋಡೆಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಮದ್ದೂರು ಸಂಚಾರಿ ಠಾಣೆ ಪಿಎಸ್ಐ ರಾಮಸ್ವಾಮಿ ಹಾಗೂ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಗಾಯಾಳುಗಳ ಸೂಕ್ತ ಚಿಕಿತ್ಸೆಗೆ ಕ್ರಮಕ್ಕೆ ಎಚ್‌ಡಿಕೆ ಸೂಚನೆ
ಮದ್ದೂರು ತಾಲೂಕಿನ ಕೋಡಿಹಳ್ಳಿ ಬಳಿ ಬಸ್ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರಿಗೆ ಸೂಕ್ತ ಚಿಕಿತ್ಸೆಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳೊಂದಿಗೆ ಅಪಘಾತದ ಬಗ್ಗೆ ದೂರವಾಣಿ ಮೂಲಕ ಮಾಹಿತಿ ಪಡೆದುಕೊಂಡ ಸಚಿವ ಕುಮಾರಸ್ವಾಮಿ ಅಗತ್ಯವಿದ್ದ ಆಸ್ಪತ್ರೆಗಳಲ್ಲಿ ಶೀಘ್ರವಾಗಿಸೂಕ್ತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.