ಸಾರಾಂಶ
ಬೆಂಗಳೂರು : ಮನೆ ಎದುರು, ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ₹2.10 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಜರಗನಹಳ್ಳಿಯ ಚಿರಂಜೀವಿ (32) ಮತ್ತು ಕೊತ್ತನೂರು ದಿಣ್ಣೆಯ ಸೈಯದ್ ಸಮೀರ್(32) ಬಂಧಿತರು. ಜೆ.ಪಿ.ನಗರ 7ನೇ ಹಂತದ ನಟರಾಜ ಲೇಔಟ್ ನಿವಾಸಿಯೊಬ್ಬರು ತಮ್ಮ ಮನೆ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನವನ್ನು ದುಷ್ಕರ್ಮಿಗಳು ಕಳವು ಮಾಡಿದ್ದರು. ಈ ಸಂಬಂಧ ತನಿಖೆ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಬಾತ್ಮೀದಾರರ ಮಾಹಿತಿ ಮೇರೆಗೆ ಜ.28ರಂದು ಜೆ.ಪಿ.ನಗರ 6ನೇ ಹಂತದ ಜರಗನಹಳ್ಳಿ ಪಾರ್ಕ್ ಹಿಂಭಾಗದ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ದ್ವಿಚಕ್ರ ವಾಹನ ಸಹಿತ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ದ್ವಿಚಕ್ರ ವಾಹನ ಕಳವು ಮಾಡಿದ್ದು ತಾವೇ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಅಂತೆಯೆ ನಗರದ ವಿವಿಧೆಡೆ ಮೂರು ದ್ವಿಚಕ್ರ ವಾಹನ ಕಳವು ಮಾಡಿರುವ ವಿಚಾರ ಬಾಯ್ಬಿಟ್ಟಿದ್ದಾರೆ. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಮೂರು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ಆರೋಪಿಗಳ ಬಂಧನದಿಂದ ಪುಟ್ಟೇನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ 3 ದ್ವಿಚಕ್ರ ವಾಹನ ಕಳವು ಮತ್ತು ಜೆ.ಪಿ.ನಗರ ಠಾಣೆಯಲ್ಲಿ ದಾಖಲಾಗಿದ್ದ ಒಂದು ದ್ವಿಚಕ್ರ ವಾಹನ ಕಳವು ಪ್ರಕರಣ ಸೇರಿ ಒಟ್ಟು ನಾಲ್ಕು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ. ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.