ಸಾರಾಂಶ
ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಪಶ್ಚಿಮ ಬಂಗಾಳ ಕೋಲ್ಕತ್ತ ಮೂಲದ ಅಶ್ರಫುಲ್ ಸರ್ದಾರ್(25) ಮತ್ತು ಸಾಬುಲ್ ಬಾದ್ ಶಾ(19) ಬಂಧಿತರು. ಆರೋಪಿಗಳಿಂದ 2 ಲಕ್ಷ ರು. ಮೌಲ್ಯದ 5 ಕೆ.ಜಿ.ಗಾಂಜಾ ಜಪ್ತಿ ಮಾಡಲಾಗಿದೆ. ಮೇ 24ರಂದು ಅಮೃತಹಳ್ಳಿ ಕೆರೆ ಬಳಿಯ ಖಾಲಿ ಜಾಗದಲ್ಲಿ ಇಬ್ಬರು ಅಪರಿಚಿತರು ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಾತ್ಮೀದಾರರಿಂದ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಬ್ಬರು ಆರೋಪಿಗಳು ಗುಜರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಪರಿಚಿತ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ನಗರಕ್ಕೆ ತಂದು ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಇಬ್ಬರ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.