ಸಾರಾಂಶ
ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪುನಃ ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ನವದೆಹಲಿ: ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪುನಃ ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಬುಧವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘60 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ ನೀಡಲು ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲಾಗುತ್ತದೆ. ಸರ್ಕಾರಿ ಆಸ್ಪತ್ರೆ ಜತೆ ಖಾಸಗಿ ಆಸ್ಪತ್ರೆಗಳಲ್ಲೂ ಈ ಯೋಜನೆ ಅಡಿ ಉಚಿತ ಚಿಕಿತ್ಸೆ ಲಭಿಸಲಿದೆ. 2-3 ದಿನಗಳಲ್ಲಿ ನೋಂದಣಿ ಕೂಡ ಆರಂಭವಾಗಲಿದೆ. ಆಪ್ ಪಕ್ಷದ ಕಾರ್ಯಕರ್ತರೇ ಮನೆ ಮನೆಗೆ ತೆರಳಿ ಅರ್ಹ ಹಿರಿಯ ನಾಗರಿಕರ ಹೆಸರನ್ನು ನೋಂದಣಿ ಮಾಡಲಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಯೋಜನೆ ಕಾರ್ಯರೂಪಕ್ಕೆ ಬರಲಿದೆ’ ಎಂದರು.
ದಿಲ್ಲಿಯಲ್ಲಿ ಆಪ್ ಸರ್ಕಾರವು 70 ವರ್ಷ ಮೇಲ್ಪಟ್ಟವರಿಗೆ ಪೂರ್ಣ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆ ಜಾರಿ ಮಾಡಿಲ್ಲ. ಅದಕ್ಕೆ ಪ್ರತಿಯಾಗಿ ಈ ಯೋಜನೆ ಜಾರಿ ಮಾಡಿದೆ ಎಂದು ಹೇಳಲಾಗಿದೆ.