ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳುವ ಮೂಲಕ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾಮಟ್ಟದ ಹಾಗೂ ಬರ ನಿರ್ವಹಣೆಗೆ ನಿಯೋಜನೆಗೊಂಡ ನೋಡಲ್ ಅಧಿಕಾರಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರಗಾಲದ ಸನ್ನಿವೇಶ ಸೂಕ್ಷ್ಮತೆಯಿಂದ ಕೂಡಿದ್ದು, ಜನ, ಜಾನುವಾರುಗಳಿಗೆ ಆದ್ಯತೆ ಮೇರೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದರು.
ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಹಸೀಲ್ದಾರರು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ತಯಾರಿಸಿ, ಆದ್ಯತೆಗೆ ಅನುಗುಣವಾಗಿ ನೀರು ಒದಗಿಸುವ ಕುರಿತಂತೆ ತಾಲೂಕು ಮಟ್ಟದಲ್ಲಿ ಟಾಸ್ಕ್‌ಪೋರ್ಸ್ ಸಭೆ ನಡೆಸಿ ಕ್ರಿಯಾಯೋಜನೆ ರೂಪಿಸಲು ಸೂಚಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಮಾತನಾಡಿ, ಡಿಸೆಂಬರ್ ತಿಂಗಳಲ್ಲಿ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಲಿದೆ ಎಂದು ಅಂದಾಜಿಸಲಾಗಿದ್ದು, ಈ ಗ್ರಾಮಗಳಲ್ಲಿರುವ ಕೊಳವೆಬಾವಿಗಳ ದುರಸ್ತಿ, ಅಗತ್ಯವಿದ್ದಲ್ಲಿ ಹೊಸ ಕೊಳವೆಬಾವಿ ಕೊರೆಯಿಸುವುದು, ಖಾಸಗಿ ಕೊಳವೆಬಾವಿ ಹಾಗೂ ಪ್ರತಿ ವರ್ಷ ನೀರು ಕೊಡುವವರ ವಿವರವನ್ನು ತಹಸೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ನೋಡಲ್ ಅಧಿಕಾರಿಗಳು ಆಯಾ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ, ಸಭೆ ನಡೆಸಿ, ಸಭಾ ನಡಾವಳಿಗೊಂದಿಗೆ ಮಾಹಿತಿ ನೀಡಲು ತಿಳಿಸಿದರು.
ಗ್ರಾಮವಾರು ಮೇವಿನ ಲಭ್ಯತೆ ಬಗ್ಗೆ ಮಾಹಿತಿ ಕಲೆ ಹಾಕಿ ಮುಂದಿನ ನಾಲ್ಕೈದು ದಿನಗಳಲ್ಲಿ ಮೇವಿನ ಬ್ಯಾಂಕ್ ತೆರೆಯುವ ವ್ಯವಸ್ಥೆಯಾಗಬೇಕು. ನವೆಂಬರ್ 23ರಂದು ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದ್ದು, ಎಲ್ಲಾ ಅಧಿಕಾರಿಗಳು ಅಗತ್ಯ ಸಿದ್ಧತೆಯಲ್ಲಿರಬೇಕು. ಆಯಾ ತಾಲೂಕು ತಹಸೀಲ್ದಾರರು ಸಮಸ್ಯಾತ್ಮಕ ಗ್ರಾಮಗಳ ನಿಖರ ಪಟ್ಟಿ ಸಲ್ಲಿಸುವಂತೆ ಸೂಚಿಸಿದರು. ಬರ ನಿರ್ವಹಣೆಗೆ ನೇಮಕಗೊಂಡ ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಲು ತಿಳಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹನಮರಟ್ಟಿ, ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೇನ್ನವರ, ಪಶು ಇಲಾಖೆಯ ಉಪನಿರ್ದೇಶಕ ಎಸ್.ಎಚ್. ಕರಡಿಗುಡ್ಡ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಮುಖ್ಯ ಅಭಿಯಂತರ ಪುರಾಣಿಕ ಸೇರಿದಂತೆ ಆಯಾ ತಾಲೂಕಿನ ತಹಸೀಲ್ದಾರರು ಉಪಸ್ಥಿತರಿದ್ದರು.