ರಾಜಕೀಯ ವಾಕ್ಸಮರ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ ಕಾರ್ಯಕರ್ತನೊಬ್ಬನ ಸಾವಿಗೆ ಕಾರಣವಾದ ಬಳ್ಳಾರಿ ಗುಂಡೇಟು ಪ್ರಕರಣ ಹಾಗೂ ಬಿಜೆಪಿ-ಕಾಂಗ್ರೆಸ್‌ ಸಂಘರ್ಷ ಕೇಸ್‌ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವಹಿಸಲು ಸರ್ಕಾರ ಮುಂದಾಗಿದೆ.

 ಬೆಂಗಳೂರು : ರಾಜಕೀಯ ವಾಕ್ಸಮರ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ ಕಾರ್ಯಕರ್ತನೊಬ್ಬನ ಸಾವಿಗೆ ಕಾರಣವಾದ ಬಳ್ಳಾರಿ ಗುಂಡೇಟು ಪ್ರಕರಣ ಹಾಗೂ ಬಿಜೆಪಿ-ಕಾಂಗ್ರೆಸ್‌ ಸಂಘರ್ಷ ಕೇಸ್‌ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವಹಿಸಲು ಸರ್ಕಾರ ಮುಂದಾಗಿದೆ.

ಈ ಸಂಬಂಧ ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಸಿಐಡಿ ತನಿಖೆಗೆ ವಹಿಸುವ ಕುರಿತು ಇನ್ನೆರೆಡು ದಿನಗಳಲ್ಲಿ ಆದೇಶ ಹೊರ ಬೀಳುವ ಸಾಧ್ಯತೆಗಳಿವೆ ಎಂದು ಮೂಲಗಳು ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿವೆ.

ಸಂಘರ್ಷ ವಿಚಾರವಾಗಿ ಆರು ಪ್ರಕರಣ

ಈ ಸಂಘರ್ಷ ವಿಚಾರವಾಗಿ ಆರು ಪ್ರಕರಣಗಳು ದಾಖಲಾಗಿವೆ. ಆಡಳಿತಾರೂಢ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ಪ್ರತಿಪಕ್ಷದ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಹೆಸರು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ. ಅಲ್ಲದೆ, ಪರಿಸ್ಥಿತಿ ನಿಯಂತ್ರಿಸುವಲ್ಲಿ ಸ್ಥಳೀಯ ಪೊಲೀಸರ ವೈಫಲ್ಯದ ಬಗ್ಗೆಯೂ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಸಿಐಡಿಗೆ ತನಿಖೆ ವಹಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ

ಎರಡು ದಿನಗಳ ಹಿಂದೆ ಬಳ್ಳಾರಿ ನಗರದಲ್ಲಿ ಜನಾರ್ದನ ರೆಡ್ಡಿ ಮನೆ ಬಳಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿತ್ತು. ಈ ಸಂಘರ್ಷ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದರು. ಘಟನೆ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಮುಖಂಡರಿಂದ ಪ್ರತ್ಯೇಕ ದೂರುಗಳು ಸಲ್ಲಿಕೆಯಾಗಿದ್ದವು. ಈ ದೂರುಗಳ ಮೇರೆಗೆ ಶಾಸಕರಾದ ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಸೇರಿ ಇತರರ ವಿರುದ್ಧ ಪ್ರತ್ಯೇಕವಾಗಿ ಎಫ್‌ಐಆರ್‌ಗಳು ದಾಖಲಾಗಿದ್ದವು.