ಸಾರಾಂಶ
ಬೆಂಗಳೂರು : ಮನೆ ಎದುರು, ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ್ದ ಬೈಕ್‌ಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ ಆರೋಪಿಯನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಾದರಾಯನಪುರ ಹಳೇ ಗುಡ್ಡದಹಳ್ಳಿ ನಿವಾಸಿ ಉಮರ್ ಫಾರೂಖ್ ಅಲಿಯಾಸ್ ಮೊಹಮ್ಮದ್ ಉಮರ್(24) ಬಂಧಿತ. ಆರೋಪಿಯಿಂದ 3 ಲಕ್ಷ ರು. ಮೌಲ್ಯದ 6 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಚಿಕ್ಕಪೇಟೆ ಕ್ರಾಸ್ ಸಂತುಸಾಪೇಟೆ ನಿವಾಸಿ ಕೆ.ವಿ.ಶಬರೀಷ್ ಎಂಬುವವರು ತಮ್ಮ ಮನೆ ಎದುರು ನಿಲುಗಡೆ ಮಾಡಿದ್ದ ಬೈಕನ್ನು ದುಷ್ಕರ್ಮಿಗಳು ಕಳವು ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯು ವೃತ್ತಿಪರ ಕಳ್ಳನಾಗಿದ್ದಾನೆ. ರಾತ್ರಿ ವೇಳೆ ನಗರದ ವಿವಿಧೆಡೆ ಸುತ್ತಾಡಿ ಮನೆ ಎದುರು ಅಥವಾ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚ್ರಕ ವಾಹನಗಳನ್ನು ಗುರಿಯಾಗಿಸಿಕೊಂಡು ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ. ಕದ್ದ ದ್ವಿಚಕ್ರ ವಾಹನಗಳನ್ನು ಪರಿಚಿತರ ಮುಖಾಂತರ ವಿಲೇವಾರಿ ಮಾಡಿಸಿ ಬಂದ ಹಣದಲ್ಲಿ ಮೋಜು-ಮಸ್ತಿ ಮಾಡಿ ವ್ಯಯಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.