ಸಾರಾಂಶ
ಭುವನೇಶ್ವರ: ‘ನೀಟ್-2024ಪರೀಕ್ಷೆಯಲ್ಲಿ ಎರಡು ರೀತಿಯ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಅಕ್ರಮದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್‌ಟಿಎ) ಅಧಿಕಾರಿಗಳು ಭಾಗಿಯಾಗಿದ್ದು ಕಂಡುಬಂದರೆ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಒಡಿಶಾದ ಸಂಭಲ್‌ಪುರಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ‘ಪರೀಕ್ಷೆಯಲ್ಲಿ ಎರಡು ರೀತಿಯ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ ಎಂದರು.
ಪೂರ್ವಭಾವಿ ಮಾಹಿತಿಯ ಪ್ರಕಾರ ಕೆಲ ವಿದ್ಯಾರ್ಥಿಗಳಿಗೆ ಕಡಿಮೆ ಪರೀಕ್ಷಾ ಸಮಯ ದೊರಕಿದ ಕಾರಣ ಗ್ರೇಸ್ ಅಂಕಗಳನ್ನು ನೀಡಲಾಗಿತ್ತು. ಆದರೆ ಇದನ್ನು ರದ್ದುಗೊಳಿಸಿ 1,563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಆದೇಶಿಸಿದೆ. ಇದೇ ವೇಳೆ ಇನ್ನೂ 2 ಇತರ ಅಕ್ರಮಗಳು ನಡೆದಿರುವುದು ಕಂಡುಬಂದಿದೆ. ಈ ಬಗ್ಗೆ ಇಲಾಖಾ ತನಿಖೆ ನಡೆದಿದೆ’ ಎಂದರು.
ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಭರವಸೆಯಿತ್ತಿರುವ ಪ್ರಧಾನ್, ಯಾವುದೇ ಅಧಿಕಾರಿಗಳು ಅಕ್ರಮದಲ್ಲಿ ಭಾಗಯಾಗಿರುವುದು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಸ್ವಾಯತ್ತ ಸಂಸ್ಥೆಯಾಗಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಕಾರ್ಯವೈಖರಿಯಲ್ಲಿ ಬದಲಾವಣೆಗಳನ್ನು ಮಾಡುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.