ಸಾರಾಂಶ
ಗೋವಾದಲ್ಲಿ ನಾಲ್ಕು ದಶಕಗಳಿಂದ ವಾಸವಿರುವ ಕನ್ನಡಿಗರನ್ನು ಒಕ್ಕಲೆಬ್ಬಿಸುತ್ತಿರುವ ಅಲ್ಲಿನ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.
ಬೆಂಗಳೂರು : ಗೋವಾದಲ್ಲಿ ನಾಲ್ಕು ದಶಕಗಳಿಂದ ವಾಸವಿರುವ ಕನ್ನಡಿಗರನ್ನು ಒಕ್ಕಲೆಬ್ಬಿಸುತ್ತಿರುವ ಅಲ್ಲಿನ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.
ಇಡೀ ಗೋವಾದಲ್ಲಿ ಕನ್ನಡಿಗರು ಯಾರೂ ಇರಬಾರದು ಎಂಬ ತೀರ್ಮಾನಕ್ಕೆ ಅಲ್ಲಿನ ಸರ್ಕಾರ ಬಂದಂತಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ ಗೋವಾ ಸರ್ಕಾರವನ್ನು ವಜಾಗೊಳಿಸಿ, ಕನ್ನಡಿಗರಿಗೆ ನ್ಯಾಯ ಕೊಡಿಸಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಆಗ್ರಹಿಸಿದ್ದಾರೆ.
ಸೋಮವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಉತ್ತರ ಗೋವಾದ ಸಾಂಗೋಲ್ಡಾ ಪ್ರದೇಶದಲ್ಲಿ ಭಾನುವಾರ 15ಕ್ಕೂ ಹೆಚ್ಚು ಕನ್ನಡಿಗರ ಮನೆಗಳನ್ನು ಜೆಸಿಬಿ ಬಳಸಿ ಧ್ವಂಸಗೊಳಿಸಲಾಗಿದೆ. ಅವರಿಗೆ ಅನ್ನ, ನೀರು, ಸೂರು ಇಲ್ಲದಂತೆ ಮಾಡಲಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ನಾಲ್ಕು ದಶಕಗಳಿಂದ ಆ ಪ್ರದೇಶದಲ್ಲಿ ವಾಸವಾಗಿದ್ದ ಕನ್ನಡಿಗರನ್ನು ಏಕಾಏಕಿ ತೆರವುಗೊಳಿಸಲಾಗಿದೆ. ಹದಿನೈದು ಕನ್ನಡಿಗರ ಕುಟುಂಬಗಳು ಬೀದಿಪಾಲಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿರಿಯಾ, ಲೆಬೆನಾನ್ ದೇಶಗಳಲ್ಲಿ ವಲಸಿಗರನ್ನು ಒಕ್ಕಲೆಬ್ಬಿಸುತ್ತಿರುವಂತೆ ಗೋವಾದಲ್ಲಿ ಕನ್ನಡಿಗರನ್ನು ಗುರಿಯಾಗಿಟ್ಟುಕೊಂಡು ಅಲ್ಲಿನ ಸರ್ಕಾರ ತೆರವು ಕಾರ್ಯಾಚರಣೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಆರನೇ ಬಾರಿ ಇಂಥ ದುಷ್ಕೃತ್ಯವನ್ನು ಎಸಗುತ್ತಿದೆ ಎಂದು ಆರೋಪಿಸಿದ್ದಾರೆ.